ವಿಜಯಸಾಕ್ಷಿ ಸುದ್ದಿ, ಗದಗ: 2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲು ಎಸ್‌ಡಿಪಿಐ ಪಕ್ಷ ತೀರ್ಮಾನಿಸಿದ್ದು, ಕಳೆದ ಎರಡು ವರ್ಷಗಳಿಂದಲೇ ಚುನಾವಣಾ ಪೂರ್ವ ಸಿದ್ಧತೆಗಳನ್ನು ಆರಂಭಿಸಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ತಿಳಿಸಿದರು.
ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಸಂಘಟನೆ ಬಲಪಡಿಸುವುದು ಹಾಗೂ ಜನಪರ ಹೋರಾಟಗಳನ್ನು ತೀವ್ರಗೊಳಿಸುವ ಉದ್ದೇಶದಿಂದ ರಾಜ್ಯಾದ್ಯಂತ ವ್ಯಾಪಕ ಸಿದ್ಧತೆ ಕೈಗೊಳ್ಳಲಾಗಿದೆ. ಗದಗ ಸೇರಿದಂತೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರ್ಧಾರ ಕೈಗೊಂಡಿದ್ದು, ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಿದರು.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಪ್ರತಿಕ್ರಿಯಿಸಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಪಕ್ಷದ ವಿರೋಧವಿಲ್ಲ. ಆದರೆ, ಅದರ ಹೆಸರಿನಲ್ಲಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ರೀತಿಯಲ್ಲಿ ನಡೆಯುತ್ತಿರುವ ಪ್ರಕ್ರಿಯೆ ಜನವಿರೋಧಿ ಹಾಗೂ ಸಂವಿಧಾನ ವಿರೋಧಿಯಾಗಿದೆ ಎಂದು ಆರೋಪಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅವೈಜ್ಞಾನಿಕ ಕ್ರಮಗಳನ್ನು ಅನುಸರಿಸಲಾಗುತ್ತಿದ್ದು, 2002ರ ದಾಖಲೆಗಳನ್ನು ಕಡ್ಡಾಯಗೊಳಿಸುವುದು ಸಮಂಜಸವಲ್ಲ. ಕೇವಲ ಹೆಸರಿನ ಕಾಗುಣಿತದ ದೋಷವನ್ನು ಆಧಾರವನ್ನಾಗಿ ಮಾಡಿಕೊಂಡು ಕ್ರಮ ಕೈಗೊಳ್ಳುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.
ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಮೇಲೆ ಅನಗತ್ಯ ಒತ್ತಡ ಹೇರಿ ಕೆಲಸ ಮಾಡಲಾಗುತ್ತಿದೆ. ಸಮರ್ಪಕ ಮ್ಯಾಪಿಂಗ್ ನಡೆಸದೆ ಗುರಿ ನಿಗದಿಪಡಿಸುವುದರಿಂದ ಒಬ್ಬರ ಮಾಹಿತಿಯನ್ನು ಮತ್ತೊಬ್ಬರ ಹೆಸರಿಗೆ ಮ್ಯಾಪಿಂಗ್ ಮಾಡುವಂತಹ ಗೊಂದಲಗಳು ಉಂಟಾಗುತ್ತಿವೆ ಎಂದು ಆರೋಪಿಸಿದರು.
ಪ್ರಸ್ತುತ ರಾಜ್ಯದಲ್ಲಿ ಯಾವುದೇ ಚುನಾವಣೆಗಳಿಲ್ಲ. ಆದ್ದರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಅನಗತ್ಯ ಗಡಿಬಿಡಿ ಮಾಡದೆ, ಬಿಎಲ್‌ಒಗಳು ತಮ್ಮ ನಿಯಮಿತ ಕರ್ತವ್ಯಗಳನ್ನು ನಿರ್ವಹಿಸಿದ ಬಳಿಕ ಮನೆ-ಮನೆಗೆ ತೆರಳಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಬೇಕು. ನಿರಂತರ ಒತ್ತಡದಿಂದ ಹಲವಾರು ಬಿಎಲ್‌ಒಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅಬ್ದುಲ್ ಮಜೀದ್ ಮೈಸೂರು ಹೇಳಿದರು.
“ಮತದಾರರ ಪಟ್ಟಿ ಪರಿಷ್ಕರಣೆ ತಪ್ಪಲ್ಲ. ಆದರೆ ಎಸ್‌ಐಆರ್ ಹೆಸರಿನಲ್ಲಿ ಜನರನ್ನು ಸಂಕಷ್ಟಕ್ಕೆ ತಳ್ಳುವುದು ಹಾಗೂ ಬಿಎಲ್‌ಒಗಳ ಮೇಲೆ ಒತ್ತಡ ಹೇರುವುದು ಸರಿಯಲ್ಲ. ಈ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು.”
– ಅಬ್ದುಲ್ ಮಜೀದ್ ಮೈಸೂರು, ರಾಜ್ಯಾಧ್ಯಕ್ಷ, ಎಸ್‌ಡಿಪಿಐ
ವಿಪಕ್ಷ ನಿರ್ಮೂಲನೆ ಯತ್ನ: ಆರೋಪ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ಕೇಂದ್ರ ಸರ್ಕಾರವು ದೇಶವನ್ನು ವಿಪಕ್ಷ ರಹಿತವಾಗಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಡೆಗಣಿಸಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿಗೆ ಮತ ಹಾಕುವವರನ್ನು ಮಾತ್ರ ಉಳಿಸಿ, ಉಳಿದವರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ದೂರಿದರು.
ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತ ಸಮುದಾಯಗಳು ಒಗ್ಗಟ್ಟಾಗಿ ಪ್ರಜಾಪ್ರಭುತ್ವ ರಕ್ಷಣೆಗಾಗಿ ಹೋರಾಟ ನಡೆಸಬೇಕಾದ ಅಗತ್ಯವಿದೆ. ಸ್ಥಳೀಯ ಸಂಸ್ಥೆಗಳಿಂದ ಹಿಡಿದು ಲೋಕಸಭೆ ಚುನಾವಣೆಯವರೆಗೆ ಎಸ್‌ಡಿಪಿಐ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ ಎಂದು ತಿಳಿಸಿದರು.



