ಬೆಳಗಾವಿ: SDRF ವಿಭಾಗದ ಸಿಪಿಐ ಅಧಿಕಾರಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಮೃತರನ್ನು ಸಿಪಿಐ ಶ್ರೀಶೈಲ ಚೌಗಲೆ (37) ಎಂದು ಗುರುತಿಸಲಾಗಿದೆ. ಅವರು ಬೆಳಗಾವಿಯ ಚನ್ನಮ್ಮ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಾಹಿತಿಯ ಪ್ರಕಾರ, ಶ್ರೀಶೈಲ ಚೌಗಲೆ ಅವರು ಮನೆಯ ಕೋಣೆಯ ಬಾಗಿಲು ಹಾಕಿಕೊಂಡು ನೇಣುಬಿಗಿದುಕೊಂಡಿದ್ದಾರೆ. ಅನುಮಾನಗೊಂಡ ಪತ್ನಿ ಈ ಕುರಿತು ಎಸ್ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಕೋಣೆಯ ಬಾಗಿಲು ಮುರಿದು ಅವರನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಿದರು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದು ತಿಳಿದುಬಂದಿದೆ.
ಶ್ರೀಶೈಲ ಚೌಗಲೆ ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹವನ್ನು ಬೆಳಗಾವಿಯ ಬೀಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಪ್ರಕರಣ ಸಂಬಂಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿದಿದೆ.



