ಬೆಂಗಳೂರು: ರಾಜ್ಯ ಸರ್ಕಾರವು ರಾಜಕೀಯ ನಾಯಕರ ಭದ್ರತೆಯನ್ನು ಪರಿಷ್ಕರಿಸಿದ್ದು, ಬಿಜೆಪಿ ನಾಯಕರಾದ ಚಲವಾದಿ ನಾರಾಯಣ ಸ್ವಾಮಿ ಮತ್ತು ಕೆ.ಎಸ್. ಈಶ್ವರಪ್ಪ ಅವರ ಭದ್ರತೆಯನ್ನು ಕಡಿತಗೊಳಿಸಿದೆ.
ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಛಲವಾದಿ ನಾರಾಯಣಸ್ವಾಮಿ ಮಾತನಾಡಿದ್ದಾರೆ. ಈಗ ನಮ್ಮ ಮನೆಗೆ ಬೆಂಗಾವಲು ರಕ್ಷಕರನ್ನು ಕೊಟ್ಟಿದ್ದರು. ಭದ್ರತಾ ದೃಷ್ಟಿಯಿಂದ ಕೊಡಲೇ ಬೇಕು.
ಆದರೆ ಮೂವರು ಭದ್ರತಾ ಸಿಬ್ಬಂದಿಯನ್ನು ವಾಪಸ್ ಪಡೆದಿದ್ದಾರೆ. ಇದರ ಹಿಂದೆ ಪ್ರಿಯಾಂಕ್ ಖರ್ಗೆ ಇದ್ದಾರೆ. ನನಗೆ ಏನಾದರೂ ಆದರೆ ಸರ್ಕಾರ ಎಷ್ಟು ಹೊಣೆಯೋ, ಪ್ರಿಯಾಂಕ್ ಖರ್ಗೆ ಕುಟುಂಬವೂ ಕೂಡ ಹೊಣೆ ಎಂದು ಆಕ್ರೋಶ ಹೊರಹಾಕಿದರು.
ಇವರ ಭ್ರಷ್ಟಾಚಾರ ಎತ್ತಿ ತೋರಿಸುವ ಕೆಲಸ ವಿಪಕ್ಷ ನಾಯಕರು ಮಾಡಬಾರದು ಎಂಬ ನಿರ್ಧಾರಕ್ಕೆ ಸರ್ಕಾರ ಬಂದಿದೆ. ನಾನು ವಿಪಕ್ಷ ನಾಯಕನಾಗಿ ಒಂದೂವರೆ ವರ್ಷ ಆಗುತ್ತಿದೆ. ಇಲ್ಲಿವರೆಗೂ ಸರ್ಕಾರಿ ಗೃಹ ಕೊಟ್ಟಿಲ್ಲ. ಇದೇ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾಗ ಜಗಳ ಮಾಡಿ ಮನೆ ತೆಗೆದುಕೊಂಡಿದ್ದರು ಎಂದರು.



