ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಖ್ಯಾತಿ ಪಡೆದಿದ್ದ ಮುರಳಿ ಮೋಹನ್ ಅವರು ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಜೆಸಿ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮುರಳಿ ಮೋಹನ್ ಅವರು ಐದಾರು ವರ್ಷಗಳಿಂದ ಚಿಕಿತ್ಸೆಯಲ್ಲಿದ್ದರು. ಶಸ್ತ್ರಚಿಕಿತ್ಸೆಗೆ 30ರಿಂದ 35 ಲಕ್ಷ ರೂಪಾಯಿ ಅವಶ್ಯಕತೆ ಇದ್ದುದರಿಂದ, ಈ ಹಿಂದೆ ಅನುದಾನದ ಅವಶ್ಯಕತೆಯನ್ನು ವ್ಯಕ್ತಪಡಿಸಿದ್ದರು.
ಮುರಳಿ ಮೋಹನ್ ಅವರು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ ‘ಸಂತ’, ಕ್ರೇಜಿ ಸ್ಟಾರ್ ರವಿಚಂದ್ರನ್ ನಟನೆಯ ‘ಮಲ್ಲಿಕಾರ್ಜುನ’, ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ನಾಗರಹಾವು’ ಸೇರಿದಂತೆ ಹಲವಾರು ಚಿತ್ರಗಳಿಗೆ ನಿರ್ದೇಶನ ಮಾಡಿದ್ದರು.ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದು, ಅವರ ನಿಧನಕ್ಕೆ ಆಪ್ತರು ಹಾಗೂ ಕನ್ನಡ ಚಿತ್ರರಂಗದ ಕಲಾವಿದರು ಸಂತಾಪ ವ್ಯಕ್ತಪಡಿಸಿದ್ದಾರೆ.