ಹಾಸನ:ಅಪ್ರಾಪ್ತ ಬಾಲಕಿಯೊಬ್ಬಳಿಗೆ ನಿತ್ಯ ಚಾಕೋಲೆಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪರಿಣಾಮ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ, ಅದೇ ಶಾಲೆಯಲ್ಲಿ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ ರಂಜಿತ್ ಎಂಬಾತ ಕಳೆದ ಎಂಟು ತಿಂಗಳಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.
ಬಾಲಕಿ ಹೆರಿಗೆ ನಂತರ ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಚನ್ನರಾಯಪಟ್ಟಣ ನಗರ ಠಾಣೆಯ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇನ್ನು ಕೆಲ ದಿನಗಳ ಕಾಲ ತಾಯಿ ಮತ್ತು ಮಗುವಿಗೆ ಆಸ್ಪತ್ರೆಯಲ್ಲಿ ಆರೈಕೆ ನೀಡಿದ ಬಳಿಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲಾಗುವುದು ಎಂದು ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಹೆಚ್‌ಒ) ಅನಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



