ಬಳ್ಳಾರಿ: ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ನೀಡಿ ಸರಿಯಾದ ದಾರಿಯಲ್ಲಿ ನಡೆಸಬೇಕಾದ ಉಪನ್ಯಾಸಕನೇ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆಘಾತಕಾರಿ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ.
ಬಳ್ಳಾರಿ ನಗರದ ಖಾಸಗಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ರವಿಕಿರಣ್ ಬಂಧಿತ ಆರೋಪಿಯಾಗಿದ್ದು, ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮಾಹಿತಿಯ ಪ್ರಕಾರ, 2025ರಲ್ಲಿ ಉಪನ್ಯಾಸಕ ಮತ್ತು ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ನಡುವೆ ಕಾಲೇಜಿನಲ್ಲಿ ಪರಿಚಯವಾಗಿ ಸ್ನೇಹ ಬೆಳೆಯಿತು. ನಂತರ ಈ ಸಂಬಂಧವನ್ನು ದುರುಪಯೋಗ ಮಾಡಿಕೊಂಡ ಆರೋಪಿ, “ನಿನ್ನನ್ನು ಮದುವೆಯಾಗುತ್ತೇನೆ” ಎಂದು ನಂಬಿಸಿ ಹಲವು ಬಾರಿ ನಿರ್ಜನ ಪ್ರದೇಶಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.
ಆರೋಪಿಯು ಈಗಾಗಲೇ ವಿವಾಹಿತನಾಗಿದ್ದು, ಇಬ್ಬರು ಮಕ್ಕಳಿದ್ದಾರೆ ಎಂಬ ವಿಷಯ ವಿದ್ಯಾರ್ಥಿನಿಗೆ ನಂತರ ತಿಳಿದುಬಂದಿದ್ದು, ಇದರಿಂದ ಆಕೆ ಹಾಗೂ ಕುಟುಂಬಸ್ಥರು ತೀವ್ರ ಆಘಾತಕ್ಕೊಳಗಾಗಿದ್ದಾರೆ.
ಈ ಕುರಿತು ಪೋಷಕರು ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಕಾಯ್ದೆ ಹಾಗೂ ಲೈಂಗಿಕ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತನಿಖೆ ಆರಂಭಿಸಿದ ಪೊಲೀಸರು ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.



