ಬೆಂಗಳೂರು: ಬೆಂಗಳೂರು ಮೂಲದ ಮಹಿಳೆಯೊಬ್ಬರು ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದು, ಪ್ರಕರಣ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.
ಈ ಸಂಬಂಧ ಮಹಿಳೆ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ, ಸ್ವಾಮೀಜಿ ತಮ್ಮ ಖಾಸಗಿ ವಿಡಿಯೋ ಮಾಡಿ ಲೈಂಗಿಕವಾಗಿ ಸಹಕರಿಸುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮಹಿಳೆಯ ಹೇಳಿಕೆಯ ಪ್ರಕಾರ, ಅವರು ಸ್ವಾಮೀಜಿಯ ಭಕ್ತೆಯಾಗಿದ್ದು, ಪರಿಚಯದ ನೆಪದಲ್ಲಿ ಮಠಕ್ಕೆ ಕರೆಸಿ ವಿಶ್ವಾಸ ದುರುಪಯೋಗ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ್ದಾರಂತೆ. ಅಲ್ಲದೆ, ಅವರ ತಿಳುವಳಿಕೆಯಿಲ್ಲದೆ ಖಾಸಗಿ ವಿಡಿಯೋ ಚಿತ್ರೀಕರಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ವಿಡಿಯೋವನ್ನು ಆಧಾರ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಾ, ವಿಡಿಯೋ ಕಾಲ್ ಮಾಡುವಂತೆ ಒತ್ತಾಯಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಇದರಿಂದ ತಾನು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೇನೆ ಎಂದು ಮಹಿಳೆ ತಿಳಿಸಿದ್ದಾರೆ.
ಇತ್ತೀಚೆಗೆ ಸ್ವಾಮೀಜಿಯದ್ದೆನ್ನಲಾದ ವಿಡಿಯೋ ವೈರಲ್ ಆಗಿರುವ ಹಿನ್ನೆಲೆ, ಪ್ರಕರಣ ಮತ್ತಷ್ಟು ಗಂಭೀರತೆ ಪಡೆದುಕೊಂಡಿದೆ. ದೂರು ಆಧರಿಸಿ ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.



