ಬೆಳಗಾವಿ: ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಗರ್ಲ್ಸ್ ಹೈಸ್ಕೂಲ್ ಪ್ರಿನ್ಸಿಪಾಲ್ ವಿರುದ್ಧ ಇದೀಗ ಪೊಲೀಸರು ಪೋಕ್ಸೋ ಕಾಯ್ದೆಯಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ನಡೆದ ವೇಳೆ ಯಾವುದೇ ದೂರು ದಾಖಲಾಗಿರಲಿಲ್ಲ. ಆದರೆ ಸಾಕ್ಷ್ಯಗಳು ಲಭ್ಯವಾದ ಹಿನ್ನೆಲೆಯಲ್ಲಿ ಎರಡು ದಿನಗಳ ಬಳಿಕ ತನಿಖೆ ಆರಂಭಿಸಲಾಗಿದೆ. ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನಲಾದ ಕಲ್ಲಪ್ಪ ಬೆಳಗಾಂವಕರ್ ಎಂಬ ಪ್ರಿನ್ಸಿಪಾಲ್ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಶಾಲೆಗೆ ನುಗ್ಗಿ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಪೊಲೀಸರು ಕ್ರಮ ಕೈಗೊಳ್ಳದಿದ್ದಕ್ಕೆ ರಾಜಕೀಯ ಒತ್ತಡವಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಕುರಿತು ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಅವರು, ವಿದ್ಯಾರ್ಥಿನಿ ಕುಟುಂಬದಿಂದ ದೂರು ಬರದ ಹಿನ್ನೆಲೆ ಕಾಯಲಾಗಿತ್ತು. ಆದರೆ ದೂರು ಸಲ್ಲಿಸದ ಕಾರಣ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಯಾವುದೇ ಒತ್ತಡಕ್ಕೆ ಮಣಿಯದೇ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.



