ಬೆಂಗಳೂರು: ರಾಜ್ಯ ಸರ್ಕಾರದ ಮಹಿಳಾ ಸಬಲೀಕರಣದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಅಂತರರಾಷ್ಟ್ರೀಯ ಮಟ್ಟದ ಗೌರವ ಲಭಿಸಿದೆ. ಈ ಯೋಜನೆಗೆ ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಮತ್ತು ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್ ಪ್ರಶಸ್ತಿ ಸಂದಿದೆ.
2023ರ ಜೂನ್ 11ರಂದು ಸಿಎಂ ಸಿದ್ದರಾಮಯ್ಯ ಸರ್ಕಾರ ಆರಂಭಿಸಿದ ಶಕ್ತಿ ಯೋಜನೆ ಅಡಿಯಲ್ಲಿ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಹಾಗೂ ಕೆಕೆಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಮಹಿಳೆಯರು ಇದುವರೆಗೆ 500 ಕೋಟಿಗೂ ಹೆಚ್ಚು ಉಚಿತ ಪ್ರಯಾಣ ಮಾಡಿದ್ದಾರೆ.
ಯೋಜನೆಯ ಯಶಸ್ಸಿನ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಹಿಳಾ ಪ್ರಯಾಣಿಕರು, ನಿಗಮಗಳ ಅಧಿಕಾರಿ, ಸಿಬ್ಬಂದಿ ಹಾಗೂ ಕಾರ್ಮಿಕ ಮುಖಂಡರಿಗೆ ಧನ್ಯವಾದ ತಿಳಿಸಿದ್ದಾರೆ.
ಕೆಎಸ್‌ಆರ್‌ಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಶಕ್ತಿ ಯೋಜನೆಯು ಮಹಿಳಾ ಸಬಲೀಕರಣಕ್ಕೆ ದೊಡ್ಡ ಪ್ರೋತ್ಸಾಹ ನೀಡಿದಂತೆ ಈಗ ವಿಶ್ವ ದಾಖಲೆಯಲ್ಲೂ ಹೆಸರು ದಾಖಲಿಸಿದೆ ಎಂದು ತಿಳಿಸಿದೆ.