ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬಿಜೆಪಿಯಲ್ಲಿ ಹಿರಿಯ ಹಾಗೂ ನಿಷ್ಠಾವಂತ ಕಾರ್ಯಕರ್ತರಿಗೆ ಗೌರವ, ಬೆಲೆ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಬಿಜೆಪಿ ಹಿರಿಯ ಮುಖಂಡ ಹಾಗೂ ಗ್ರಾಪಂ ಮಾಜಿ ಸದಸ್ಯ ರಾಮಗೇರಿಯ ಶಂಕ್ರಣ್ಣ ಕಾಳೆ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊರಬರುವುದಾಗಿ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆಯಲ್ಲಿ, ಹಲವು ವರ್ಷಗಳಿಂದ ಪಕ್ಷ ಸಂಘಟನೆ ಹಾಗೂ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಪಕ್ಷ ನೀಡಿದ ಅವಕಾಶದ ಅವಧಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಗ್ರಾಮದಲ್ಲಿ ದೇವಸ್ಥಾನಗಳ ನಿರ್ಮಾಣ ಹಾಗೂ ಅಭಿವೃದ್ಧಿ ಕಾರ್ಯಗಳ ಮೂಲಕ ಪಕ್ಷ ಸಂಘಟನೆಗೆ ಶ್ರಮಿಸಿದ್ದೇನೆ ಎಂದು ತಿಳಿಸಿದ್ದಾರೆ.
ಆದರೆ ಇತ್ತೀಚಿನ ವರ್ಷಗಳಲ್ಲಿ ತಮ್ಮಂತಹ ಹಿರಿಯ, ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ಪಕ್ಷದ ಸಿದ್ಧಾಂತ ಹಾಗೂ ಸಂಘಟನೆಗಾಗಿ ಪ್ರಾಮಾಣಿಕವಾಗಿ ದುಡಿದವರಿಗೆ ಬೆಲೆ ಇಲ್ಲದಂತಾಗಿದೆ. ಇದರಿಂದ ಮನನೊಂದು ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಶಂಕ್ರಣ್ಣ ಕಾಳೆ ತಿಳಿಸಿದ್ದಾರೆ.



