ಹುಬ್ಬಳ್ಳಿ: ಬಿಜೆಪಿ ಮಹಿಳಾ ಕಾರ್ಯಕರ್ತೆಯನ್ನು ಪೊಲೀಸರು ಬಟ್ಟೆ ಬಿಚ್ಚಿ ಥಳಿಸಿದ್ದಾರೆ ಎಂಬ ಆರೋಪ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರಕರಣದ ಹಿನ್ನೆಲೆ ಹಾಗೂ ಸತ್ಯಾಸತ್ಯತೆಯನ್ನು ವಿವರಿಸಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಕೇಶ್ವಾಪುರ ಠಾಣಾ ವ್ಯಾಪ್ತಿಯಲ್ಲಿ ಗಲಾಟೆ ನಡೆದಿತ್ತು. ಬೂತ್ ಅಧಿಕಾರಿಗಳೊಂದಿಗೆ ತೆರಳಿದ್ದ ಬಿಜೆಪಿ ಕಾರ್ಯಕರ್ತೆ, “ನಮ್ಮ ವೋಟ್ ಡಿಲೀಟ್ ಮಾಡಿದ್ದಾರೆ” ಎಂದು ಆರೋಪಿಸಿ ಗಲಾಟೆ ನಡೆಸಿದ್ದರು. ಈ ಘಟನೆ ಬಳಿಕ ಬಿಜೆಪಿ–ಕಾಂಗ್ರೆಸ್ ನಡುವೆ ತಿಕ್ಕಾಟ ಮುಂದುವರಿದಿತ್ತು.
ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ನ ನಗರ ಪಾಲಿಕೆ ಸದಸ್ಯೆ ಸುವರ್ಣ ಕಲ್ಲಕುಂಟ್ಲಾ ದೂರು ನೀಡಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರಿಂದಲೂ ಪ್ರತಿದೂರು ದಾಖಲಾಗಿತ್ತು. ಸುವರ್ಣ ಕಲ್ಲಕುಂಟ್ಲಾ ನೀಡಿದ ದೂರಿನ ಮೇರೆಗೆ ಬಿಎನ್ಎಸ್ ಸೆಕ್ಷನ್ 307 ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
ಆಯುಕ್ತರ ಪ್ರಕಾರ, ಬಂಧಿತ ಮಹಿಳೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಮಹಿಳೆಯೊಬ್ಬರ ಕತ್ತು ಹಿಸುಕಲು ಯತ್ನಿಸಿದ್ದು ಹಾಗೂ ಖಾಸಗಿ ಅಂಗಕ್ಕೆ ಹೊಡೆದಿರುವ ಕುರಿತು ಸಾಕ್ಷ್ಯ ಸಿಕ್ಕ ಹಿನ್ನೆಲೆಯಲ್ಲಿ ಅರೆಸ್ಟ್ ಮಾಡಲಾಗಿದೆ.
ಬಂಧನದ ವೇಳೆ ಮಹಿಳೆ ವಿವಸ್ತ್ರಳಾಗಿರಲಿಲ್ಲ. ಪೊಲೀಸ್ ವ್ಯಾನ್ ಒಳಗೆ ಹತ್ತಿಸಿದ ಬಳಿಕ ತಾನೇ ಬಟ್ಟೆ ಬಿಚ್ಚಿಕೊಂಡು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಆಯುಕ್ತರು ಹೇಳಿದ್ದಾರೆ. ಮಹಿಳಾ ಹಾಗೂ ಪುರುಷ ಸಿಬ್ಬಂದಿಗೆ ಕಚ್ಚಿ ಗಾಯಗೊಳಿಸಿದ್ದು, ನಾಲ್ವರು ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ.
2020ರಿಂದ ಈ ಮಹಿಳೆಯ ವಿರುದ್ಧ ಧಾರವಾಡ ಮತ್ತು ಹುಬ್ಬಳ್ಳಿ ವ್ಯಾಪ್ತಿಯಲ್ಲಿ ಒಟ್ಟು 9 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲೇ ಹೆಚ್ಚುವರಿ ಮಹಿಳಾ ಸಿಬ್ಬಂದಿ ನಿಯೋಜಿಸಿ ಬಂಧನ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದನ್ನು ಯಾರು ಶೂಟ್ ಮಾಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಿಡಿಯೋ ವೈರಲ್ ಮಾಡಿದವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.



