HomeGadag Newsಶಿರಹಟ್ಟಿ ತಾಲೂಕು ಕ್ರೀಡಾಕೂಟದಲ್ಲಿ ಅವ್ಯವಸ್ಥೆ ಆರೋಪ: ಶುದ್ಧ ನೀರು, ಊಟದ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳ ಪರದಾಟ!

ಶಿರಹಟ್ಟಿ ತಾಲೂಕು ಕ್ರೀಡಾಕೂಟದಲ್ಲಿ ಅವ್ಯವಸ್ಥೆ ಆರೋಪ: ಶುದ್ಧ ನೀರು, ಊಟದ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳ ಪರದಾಟ!

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ

ಶಿರಹಟ್ಟಿ ಪಟ್ಟಣದ ಶ್ರೀ ಎಸ್.ಎಂ. ಡಬಾಲಿ ತಾಲೂಕು ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕುಗಳ 14 ಹಾಗೂ 17 ವರ್ಷದೊಳಗಿನ ಬಾಲಕ, ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮೂಲಸೌಲಭ್ಯಗಳ ಕೊರತೆ ಕಂಡುಬಂದಿದೆ ಎಂಬ ಆರೋಪ ಕೇಳಿಬಂದಿದೆ.

ಜಿಪಂ ಗದಗ, ತಾಪಂ ಶಿರಹಟ್ಟಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಂಯುಕ್ತ ಆಶ್ರಯದಲ್ಲಿ ನಡೆದ ಕ್ರೀಡಾಕೂಟದಲ್ಲಿ ಎರಡೂ ತಾಲೂಕುಗಳಿಂದ ಸುಮಾರು 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 53 ಶಿಕ್ಷಕರು ಭಾಗವಹಿಸಿದ್ದರು. ಆದರೆ ವಿದ್ಯಾರ್ಥಿಗಳಿಗೆ ಸಮರ್ಪಕ ಕುಡಿಯುವ ನೀರು, ಊಟ ಹಾಗೂ ಉಪಹಾರದ ವ್ಯವಸ್ಥೆ ಇರಲಿಲ್ಲ ಎಂದು ಆರೋಪಿಸಲಾಗಿದೆ.

ಬಿರು ಬಿಸಿಲಿನ ನಡುವೆಯೇ ವಿದ್ಯಾರ್ಥಿಗಳು ಟ್ಯಾಂಕರ್ ನೀರನ್ನೇ ಅವಲಂಬಿಸಬೇಕಾಯಿತು. ಕೆಲವರು ಮನೆಯಿಂದ ತಂದ ಆಹಾರ ಸೇವಿಸಿದರೆ, ಆಹಾರ ತರದ ವಿದ್ಯಾರ್ಥಿಗಳು ಪರದಾಡುವಂತಾಯಿತು ಎನ್ನಲಾಗಿದೆ.

ಕ್ರೀಡಾಕೂಟಕ್ಕೆ ಆಗಮಿಸಿದ್ದ ಮಹಿಳಾ ದೈಹಿಕ ಶಿಕ್ಷಕರು ಕ್ರೀಡಾಂಗಣದ ವಾಶ್‌ರೂಮ್ ಬಳಕೆಗೆ ಸಮಸ್ಯೆ ಎದುರಿಸಿದರು. ವಾಶ್‌ರೂಮ್‌ಗೆ ಆಗಾಗ ಬೀಗ ಹಾಕಲಾಗುತ್ತಿತ್ತು ಎಂದು ಕೆಲ ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದರು.

ಹೆಸರಿಗಷ್ಟೇ ತಾಲೂಕು ಕ್ರೀಡಾಂಗಣ

ತಾಲೂಕು ಕ್ರೀಡಾಂಗಣಕ್ಕೆ ಸ್ಥಳೀಯ ಡಬಾಲಿ ಮನೆತನದವರು ಜಮೀನು ದಾನ ಮಾಡಿದ್ದರೂ ಅಗತ್ಯ ಮೂಲಸೌಲಭ್ಯಗಳು ಸಮರ್ಪಕವಾಗಿ ಲಭ್ಯವಿಲ್ಲ. ಆಟದ ಮೈದಾನಗಳ ಸ್ಥಿತಿಯೂ ಉತ್ತಮವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕ್ರೀಡಾಕೂಟ ಆಯೋಜಿಸುವುದು ವಿದ್ಯಾರ್ಥಿಗಳಿಗೆ ತೊಂದರೆ ಉಂಟುಮಾಡುತ್ತಿದೆ ಎಂಬ ಆಕ್ಷೇಪ ವ್ಯಕ್ತವಾಗಿದೆ.

ವಿದ್ಯಾರ್ಥಿಗಳನ್ನು ಕ್ರೀಡಾಕೂಟಕ್ಕೆ ಕರೆತರುವ ವೇಳೆ ಸಣ್ಣ ವಾಹನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಕರೆದೊಯ್ಯಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದ್ದು, ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಗಮನಹರಿಸಿ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಸೌಲಭ್ಯಗಳಿಗೆ ಆದ್ಯತೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

₹40 ಸಾವಿರ ಅನುದಾನ ಮಾತ್ರ

ಈ ಕುರಿತು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಲ್.ಟಿ. ಪಾಟೀಲ ಪ್ರತಿಕ್ರಿಯಿಸಿ, ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ₹40 ಸಾವಿರ ಅನುದಾನ ಲಭ್ಯವಿದೆ. ಈ ಮೊತ್ತವನ್ನು ಬಹುಮಾನ, ಮೈದಾನ ದುರಸ್ತಿ, ಪೆಂಡಾಲ್, ಮೆಡಲ್, ಟ್ರೋಫಿ ಹಾಗೂ ಪ್ರಮಾಣಪತ್ರಗಳಿಗೆ ಮಾತ್ರ ಬಳಸಲು ಅವಕಾಶವಿದೆ. ಕುಡಿಯುವ ನೀರಿಗಾಗಿ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ ಎಂದರು.

ಕ್ರೀಡಾಕೂಟದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಕನಿಷ್ಠ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಸಮರ್ಪಕವಾಗಿ ಮಾಡದಿರುವುದು ಅಧಿಕಾರಿಗಳ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಬಿರುಬಿಸಿಲಿನಲ್ಲಿ ಮಕ್ಕಳಿಗೆ ಶುದ್ಧ ನೀರು ಸಿಗದಿರುವುದು ಆತಂಕಕಾರಿ. ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ ಹೊಣೆ ಯಾರು ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕು. ಮುಂದಿನ ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಅಗತ್ಯ ಮೂಲಸೌಲಭ್ಯಗಳನ್ನು ಕಡ್ಡಾಯವಾಗಿ ಕಲ್ಪಿಸಬೇಕು.

-ಮಹಾಂತೇಶ ದಶಮನಿ, ಜಿಲ್ಲಾ ಕಾರ್ಯಾಧ್ಯಕ್ಷ, ಡಿಕೆ ಶಿವಕುಮಾರ್ ಅಭಿಮಾನಿ ಬಳಗ

—

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img