ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಮಹನೀಯರನ್ನು ಗೌರವಿಸುವುದು ಶ್ರದ್ಧಾ ಕೇಂದ್ರಗಳ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಶ್ರೀಮಠವು ಕಳೆದ ಹಲವು ವರ್ಷಗಳಿಂದ ಈ ಸಂಪ್ರದಾಯವನ್ನು ಬೆಳೆಸಿಕೊಂಡು ಬಂದಿದೆ ಎಂದು ಹರ್ಲಾಪೂರ ಕೊಟ್ಟೂರೇಶ್ವರ ಮಠದ ಡಾ. ಕೊಟ್ಟೂರೇಶ್ವರ ಮಹಾಸ್ವಾಮಿಗಳು ಹೇಳಿದರು.
ಸಮೀಪದ ಕೊಟ್ಟೂರೇಶ್ವರ ಮಠದಲ್ಲಿ ಹಮ್ಮಿಕೊಂಡಿದ್ದ 301ನೇ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ದೇಶ ರಕ್ಷಣೆ, ಕೃಷಿ, ಶೈಕ್ಷಣಿಕ, ಆರೋಗ್ಯ, ಆಧ್ಯಾತ್ಮಿಕ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಶ್ರೀಮಠವು ಸನ್ಮಾನಿಸಿ ಗೌರವಿಸುತ್ತಿದೆ. ಮನುಷ್ಯ ತಮ್ಮ ವೈಯಕ್ತಿಕ ಬದುಕಿಗಿಂತ ಸಾಮಾಜಿಕ ಸೇವೆಗೆ ಹೆಚ್ಚು ಒತ್ತು ನೀಡಿದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ಸಲಹೆ ನೀಡಿದರು.
ಮುಖ್ಯ ಅಥಿತಿಯಾಗಿ ಆಗಮಿಸಿದ್ದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಶುದ್ಧ ಗಂಗಾ ವಿಭಾಗದ ನಿಯೋಜಕ ಧರ್ಮಣ್ಣ ಭೊವೇರ್ ಮಾತನಾಡಿ, ಪುರಾಣ, ಪುಣ್ಯ ಕತೆ, ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಬದುಕಿನಲ್ಲಿ ಬರುವ ಹಲವಾರು ಸಮಸ್ಯೆಗಳಿಗೆ ಪರಿಹಾರ ತಿಳಿಯುತ್ತದೆ. ಆದ್ದರಿಂದ ತನು, ಮನ, ಧನದಿಂದ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದರು.
ಚಂದ್ರು ಕೊಂಗವಾಡ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಕೆ.ಬಿ. ಕೊಣ್ಣೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಶಿಕ್ಷಕ ರಾಮಣ್ಣ ಬೆಳಧಡಿ ಸ್ವಾಗತಿಸಿದರು. ವೆಂಕಟೇಶ ಜುಂಜಣಿ ನಿರೂಪಿಸಿದರು. ಡಾ ಎಸ್.ಸಿ. ಸರ್ವಿ ವಂದಿಸಿದರು.