ಬೆಂಗಳೂರು: ಮದುವೆಯ ಸಿದ್ಧತೆಯಲ್ಲಿದ್ದ ಕುಟುಂಬದಲ್ಲಿ ಇದೀಗ ದುಃಖದ ಛಾಯೆ ಆವರಿಸಿದೆ.

ಮದುವೆಗೆ ಇನ್ನು ನಾಲ್ಕು ದಿನಗಳಷ್ಟೇ ಬಾಕಿ ಇರುವಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಧು ಸೇರಿದಂತೆ ಇಬ್ಬರು ಯುವತಿಯರು ಪ್ರಾಣ ಕಳೆದುಕೊಂಡಿದ್ದಾರೆ.
ಮೃತರನ್ನು ಸಿಂದುಶ್ರೀ (29) ಹಾಗೂ ವಿದ್ಯಾ (19) ಎಂದು ಗುರುತಿಸಲಾಗಿದೆ. ಸಿಂದುಶ್ರೀ ಅವರಿಗೆ ಸೋಮವಾರ ಮದುವೆ ನಿಗದಿಯಾಗಿತ್ತು. ಮದುವೆಯ ಆಮಂತ್ರಣ ಪತ್ರಿಕೆಗಳನ್ನು ಹಂಚುವ ಸಲುವಾಗಿ ಸಿಂದುಶ್ರೀ ಅವರು ತಮ್ಮ ಅತ್ತೆ ಮಗಳು ವಿದ್ಯಾ ಜೊತೆ ಕತ್ರಿಗುಪ್ಪೆಗೆ ತೆರಳುತ್ತಿದ್ದರು.
ಈ ವೇಳೆ ಹಿಂಬದಿಯಿಂದ ಬಂದ ಟ್ರಕ್ ಇವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದಿದ್ದು, ಅವರ ಮೇಲೆ ಟ್ರಕ್ನ ಚಕ್ರ ಹರಿದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮಾಹಿತಿ ಪಡೆದ ಬ್ಯಾಟರಾಯನಪುರ ಸಂಚಾರ ಪೊಲೀಸರು ಟ್ರಕ್ ಅನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಮದುವೆಯ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲಿ ಇದೀಗ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.










