ಬೆಂಗಳೂರು:- ಸಾರ್ವಜನಿಕರ ದೂರು ಆಧರಿಸಿ ಸಿಲಿಕಾನ್ ಸಿಟಿ ಬೆಂಗಳೂರಿನಾದ್ಯಂತ ಸುಮಾರು 45 ಕಡೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಸಾರ್ವಜನಿಕರಿಂದ ಸಾಕಷ್ಟು ದೂರು ಕೇಳಿಬರುತ್ತಿದ್ದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಇಂದು ಬೆಂಗಳೂರಿನಾದ್ಯಂತ 45 ಕಡೆ ಏಕಕಾಲಕ್ಕೆ ದಾಳಿ ನಡೆಸಿದೆ.
ಕರ್ತವ್ಯ ಲೋಪ, ದುರಾಡಳಿತ, ಭ್ರಷ್ಟಾಚಾರ, ಸ್ವಜನಪಕ್ಷಪಾತ ಬಗ್ಗೆ ಸಾರ್ವಜನಿಕರಿಂದ ನಿರಂತರವಾಗಿ ದೂರುಗಳು ಕೇಳಿಬರುತ್ತಿತ್ತು. ಈ ಹಿನ್ನೆಲೆಯಲ್ಲಿ 83 ಬೆಸ್ಕಾಂ ಅಧಿಕಾರಿಗಳು ಹಾಗೂ 63 BWSSB ಅಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು ಇಂದು ಮಧ್ಯಾಹ್ನ 3:30ರ ಸುಮಾರಿಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಮುಖ್ಯನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಹಾಗೂ ಉಪಲೋಕಾಯುಕ್ತ ಕೆ.ಎನ್ ಫಣೀಂದ್ರ ನೇತೃತ್ವದಲ್ಲಿ ದಾಳಿ ನಡೆದಿದೆ. ಬಳಿಕ ಬೆಸ್ಕಾಂ ಹಾಗೂ ಜಲಮಂಡಳಿ ಅಧಿಕಾರಿಗಳ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ಕಡತ ಪರಿಶೀಲಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಲೋಕಾಯುಕ್ತ ನ್ಯಾ. ಬಿ.ಎಸ್ ಪಾಟೀಲ್, ಬೆಸ್ಕಾಂ ಮತ್ತು ಬಿಡಬ್ಲ್ಯೂಎಸ್‌ಎಸ್‌ಬಿ ಸಂಸ್ಥೆಗಳ ಮೇಲೆ ಸಾಕಷ್ಟು ದೂರುಗಳು ಬಂದಿತ್ತು. ಈ ಹಿನ್ನೆಲೆ ಏಕಕಾಲಕ್ಕೆ ರೇಡ್ ಮಾಡಿದ್ದೇವೆ ಎಂದು ತಿಳಿಸಿದರು.