HomePolitics Newsಕರ್ನಾಟಕ ಬಿಜೆಪಿಗೆ ಆಘಾತ; ಹಿರಿಯ ನಾಯಕ ರಾಮಚಂದ್ರೇಗೌಡ ಇನ್ನಿಲ್ಲ!

ಕರ್ನಾಟಕ ಬಿಜೆಪಿಗೆ ಆಘಾತ; ಹಿರಿಯ ನಾಯಕ ರಾಮಚಂದ್ರೇಗೌಡ ಇನ್ನಿಲ್ಲ!

For Dai;y Updates Join Our whatsapp Group

ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ವಯೋಸಹಜ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ.

ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ ಹಾಗೂ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ರಾಮಚಂದ್ರೇಗೌಡರನ್ನು ರಾಜಾಜಿನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯದಲ್ಲಿ ಚೇತರಿಕೆ ಕಾಣದೆ ಅವರು ಮೃತಪಟ್ಟಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಾಯಕರಲ್ಲಿ ರಾಮಚಂದ್ರೇಗೌಡರು ಒಬ್ಬರಾಗಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು.

ಆರ್‌ಎಸ್‌ಎಸ್‌ ಹಿನ್ನೆಲೆಯ ರಾಮಚಂದ್ರೇಗೌಡರು 1953ರಲ್ಲೇ ಸಂಘದೊಂದಿಗೆ ತಮ್ಮ ಸಾರ್ವಜನಿಕ ಜೀವನ ಆರಂಭಿಸಿದ್ದರು. ಬಳಿಕ 1970ರಲ್ಲಿ ಅಧಿಕೃತವಾಗಿ ರಾಜಕೀಯ ಪ್ರವೇಶ ಪಡೆದರು. ಬಿಜೆಪಿಯ ಹಿಂದಿನ ರೂಪವಾಗಿದ್ದ ಭಾರತೀಯ ಜನಸಂಘದ ಮೂಲಕ ಅಂದಿನ ಬೆಂಗಳೂರು ನಗರ ನಿಗಮಕ್ಕೆ ಆಯ್ಕೆಯಾದ ಮೊದಲ ಕಾರ್ಪೊರೇಟರ್ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದರು.

ಬೆಂಗಳೂರು ನಗರದಲ್ಲಿ ಬಿಜೆಪಿ ಬಲವರ್ಧನೆಗೆ ಅವರು ಮಹತ್ವದ ಕೊಡುಗೆ ನೀಡಿದ್ದರು. ರಾಜ್ಯ ರಾಜಕಾರಣದಲ್ಲಿ ಮೇಲ್ಮನೆಯ ಪ್ರಭಾವಿ ನಾಯಕರಾಗಿದ್ದ ಅವರು, ಸತತ ಐದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.

ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದ ರಾಮಚಂದ್ರೇಗೌಡರು, ಹಲವು ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದರು.

2010ರಲ್ಲಿ ವೈದ್ಯಕೀಯ ಕಾಲೇಜುಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅವರ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಡೆದ ಕಾನೂನು ಹೋರಾಟದಲ್ಲಿ ಹೈಕೋರ್ಟ್ ಪ್ರಕರಣದಿಂದ ಅವರನ್ನು ದೋಷಮುಕ್ತಗೊಳಿಸಿತ್ತು.

ಸುಮಾರು ಐದು ದಶಕಗಳ ಕಾಲ ಸಕ್ರಿಯ ರಾಜಕೀಯದಲ್ಲಿದ್ದ ರಾಮಚಂದ್ರೇಗೌಡರು, 2018ರಲ್ಲಿ ವಯೋಸಹಜ ಕಾರಣಗಳಿಂದ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದರು.

ಅವರ ನಿಧನದೊಂದಿಗೆ ಕರ್ನಾಟಕ ಬಿಜೆಪಿಯ ಆರಂಭಿಕ ಹಂತದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ನಾಯಕರೊಬ್ಬರ ಯುಗ ಅಂತ್ಯಗೊಂಡಂತಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img