ಗದಗ: ಜಿಲ್ಲೆಯಲ್ಲಿ ಅಮಾನವೀಯ ಘಟನೆ ಬೆಳಕಿಗೆ ಬಂದಿದ್ದು, ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ಜಿಲ್ಲೆಯ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ಬುದ್ಧಿಮಾಂದ್ಯ ಯುವತಿಯೊಬ್ಬಳು ಆರು ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದ್ದು, ಲೈಂಗಿಕ ದೌರ್ಜನ್ಯ ಆರೋಪದಡಿ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಯುವತಿಗೆ ಚಾಕೊಲೇಟ್ ಹಾಗೂ ತಿಂಡಿ ಕೊಡಿಸುವ ಆಮಿಷವೊಡ್ಡಿ ದುರ್ಗಪ್ಪ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಯುವತಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಯುವತಿಯ ಆರೋಗ್ಯದಲ್ಲಿ ಬದಲಾವಣೆ ಕಂಡುಬಂದ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ಅನುಮಾನ ವ್ಯಕ್ತವಾಗಿದ್ದು, ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಲಾಗಿದೆ. ಬಳಿಕ ಜುಲೈ 6ರಂದು ಯುವತಿಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಸುಮಾರು ಆರು ತಿಂಗಳ ಗರ್ಭಿಣಿಯಾಗಿರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಘಟನೆ ಬೆಳಕಿಗೆ ಬಂದ ನಂತರ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಅಲ್ಲದೆ, ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ವಿಡಿಯೊ ಗ್ರಾಮದಲ್ಲಿನ ಕೆಲವರ ಮೊಬೈಲ್ಗಳಲ್ಲಿ ಹರಿದಾಡಿದೆ ಎಂಬ ಆರೋಪವೂ ವ್ಯಕ್ತವಾಗಿದ್ದು,
ಈ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ವಿಡಿಯೊ ವೈರಲ್ ಆಗಿದೆ ಎಂಬ ಆರೋಪದ ಸತ್ಯಾಸತ್ಯತೆಯನ್ನೂ ತನಿಖೆ ಮೂಲಕವೇ ಖಚಿತಪಡಿಸಿಕೊಳ್ಳಬೇಕಿದೆ. ಇದೇ ಪ್ರಕರಣದಲ್ಲಿ ಇನ್ನೂ ಕೆಲವರ ಪಾತ್ರವಿದೆಯೇ ಎಂಬ ಅನುಮಾನವೂ ವ್ಯಕ್ತವಾಗಿದ್ದು, ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸಂತ್ರಸ್ತ ಯುವತಿಗೆ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದ್ದು, ವೈದ್ಯಕೀಯ ಚಿಕಿತ್ಸೆ ಹಾಗೂ ಅಗತ್ಯ ನೆರವು ನೀಡಲಾಗುತ್ತಿದೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಗಳ ಸತ್ಯಾಸತ್ಯತೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



