ಲಕ್ನೋ: ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಆರೋಪಿಯೊಬ್ಬ ಫರಿದಾಬಾದ್ ಜೈಲಿನಲ್ಲೇ ಹತ್ಯೆಯಾಗಿರುವ ಘಟನೆ ವರದಿಯಾಗಿದೆ. ಅಬ್ದುಲ್ ರೆಹಮಾನ್ ಎಂಬ 20 ವರ್ಷದ ಆರೋಪಿಯನ್ನು ಜೈಲಿನಲ್ಲಿದ್ದ ಸಹ ಕೈದಿ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.
ಭಾನುವಾರ ಅಬ್ದುಲ್ ರೆಹಮಾನ್ ಮತ್ತು ಅರುಣ್ ಚೌಧರಿ ನಡುವೆ ಜಗಳ ನಡೆದಿದ್ದು, ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ ರಾತ್ರಿ 8 ಗಂಟೆ ಸುಮಾರಿಗೆ ಅರುಣ್ ಚೌಧರಿ ರೆಹಮಾನ್‌ನ ತಲೆಗೆ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರೆಹಮಾನ್‌ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.
ಘಟನೆ ಸಂಬಂಧ ಜೈಲು ಆಡಳಿತ ಹಾಗೂ ಪೊಲೀಸ್ ಇಲಾಖೆ ತನಿಖೆಗೆ ಆದೇಶಿಸಿದ್ದು, ಜೈಲಿನ ಭದ್ರತಾ ವ್ಯವಸ್ಥೆಗಳ ಮೇಲೂ ಪರಿಶೀಲನೆ ನಡೆಸಲಾಗುತ್ತಿದೆ.



