ಲಕ್ನೋ: ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯಲ್ಲಿ ಗುಂಡಿನ ದಾಳಿ ನಡೆದಿದೆ.

ಪಟಾಕಿ ಸಿಡಿಸುವ ವಿಚಾರಕ್ಕೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ರಾಷ್ಟ್ರಪತಿ ಭವನದಲ್ಲಿ ಸೇವೆ ಸಲ್ಲಿಸುತ್ತಿರುವ ರಾಷ್ಟ್ರಪತಿ ಅಂಗರಕ್ಷಕ ದಳದ ಯೋಧನ ತಲೆಗೆ ಗುಂಡು ಹಾರಿಸಲಾಗಿದೆ. ಘಟನೆಯಲ್ಲಿ 26 ವರ್ಷದ ಸೌರಭ್ ತೋಮರ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಮಲಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲ್ಪುರ ಖದಾನ ಗ್ರಾಮದಲ್ಲಿ ನವೆಂಬರ್ 8ರಂದು ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 2021ರಲ್ಲಿ ಸೇನೆಗೆ ಸೇರ್ಪಡೆಯಾಗಿದ್ದ ಸೌರಭ್, ಪ್ರಸ್ತುತ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಅಂಗರಕ್ಷಕ ದಳದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ದೀಪಾವಳಿ ರಜೆಗಾಗಿ ಸ್ವಗ್ರಾಮಕ್ಕೆ ಬಂದಿದ್ದ ವೇಳೆ ಈ ದಾಳಿ ನಡೆದಿದೆ.
ಸೌರಭ್ ತಮ್ಮ ಸಹೋದರರೊಂದಿಗೆ ಮನೆಯ ಹೊರಗೆ ಪಟಾಕಿ ಸಿಡಿಸುತ್ತಿದ್ದಾಗ, ಹಳೆಯ ವೈಷಮ್ಯ ಹೊಂದಿದ್ದ ಧೀರಜ್ ಮತ್ತು ಮೋನು ಎಂಬುವವರು ಗನ್ ಹಾಗೂ ದೊಣ್ಣೆಗಳೊಂದಿಗೆ ಬಂದು ಜಗಳ ಆರಂಭಿಸಿದ್ದಾರೆ. ಈ ವೇಳೆ ಧೀರಜ್ ದೇಶಿ ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾನೆ. ಗುಂಡು ಮೊದಲು ಗೋಡೆಗೆ ತಾಗಿ, ಬಳಿಕ ಸೌರಭ್ ಅವರ ಕಿವಿಯ ಹಿಂಭಾಗದ ಮೂಲಕ ತಲೆಗೆ ಹೊಕ್ಕಿದೆ ಎನ್ನಲಾಗಿದೆ.
ಇನ್ನೊಂದೆಡೆ, ಮತ್ತೊಬ್ಬ ಆರೋಪಿ ಮೋನು ಸೌರಭ್ ಅವರ ಸಹೋದರ ವಿನೀತ್ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ತಲೆಗೆ ಗಾಯಗೊಳಿಸಿದ್ದಾನೆ. ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೀರತ್ನ ಖಾಸಗಿ ಆಸ್ಪತ್ರೆಯಲ್ಲಿ ಸೌರಭ್ಗೆ ಶಸ್ತ್ರಚಿಕಿತ್ಸೆ ನಡೆಸಿ ತಲೆಯಲ್ಲಿದ್ದ ಗುಂಡನ್ನು ಹೊರತೆಗೆಯಲಾಗಿದೆ. ಸದ್ಯ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವಿನೀತ್ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಬಳಿಕ ಆರೋಪಿಗಳು ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಾಳುಗಳ ತಂದೆ ಜನಕರಾಜ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕಾಗಿ ಬಾಗ್ಪತ್ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.










