ವಿಜಯಸಾಕ್ಷಿ ಸುದ್ದಿ, ಗದಗ: ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರ ಅಳಲು ಆಲಿಸಿ ಬರ ಪರಿಸ್ಥಿತಿಯ ಅವಲೋಕನಕ್ಕಾಗಿ ಮಂಗಳವಾರ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಾಲೂಕಿನ ಕುರ್ತಕೋಟಿ ಗ್ರಾಮದ ವಿಬಿಜಿ ರಾಮ್ಜಿ ಕೂಲಿಕಾರರೊಂದಿಗೆ ಸಂವಾದ ನಡೆಸಿದರು.
ಈ ಹಿಂದೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸಮುದಾಯ ಕಂದಕ ಬದು ಕಾಮಗಾರಿಗೆ ಅವಕಾಶವಿತ್ತು. ಈಗ ಜಾರಿಯಾಗಿರುವ ‘ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ)’ ಯೋಜನೆಯಲ್ಲಿಯೂ ಈ ಕಾಮಗಾರಿಯನ್ನು ಮುಂದುವರಿಸಲು ಅವಕಾಶ ಕಲ್ಪಿಸಬೇಕು ಎಂದು ಕೂಲಿಕಾರರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆ ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಕೂಲಿ ಕೆಲಸದ ಕೊರತೆಯಿಂದ ಕುಟುಂಬ ನಿರ್ವಹಣೆಗೆ ತೊಂದರೆಯಾಗುತ್ತಿದೆ ಎಂದು ಅವರು ವಿವರಿಸಿದರು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಪ್ಪಣ್ಣ ಇನಾಮತಿ ಮಾತನಾಡಿ, ರೈತರು ತಮ್ಮ ಜಮೀನಿನಲ್ಲಿ ಬದು ನಿರ್ಮಿಸಿಕೊಳ್ಳುವುದರಿಂದ ಅಂತರ್ಜಲ ಪ್ರಮಾಣ ಹೆಚ್ಚುವುದರ ಜತೆಗೆ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗುವುದನ್ನು ತಡೆಯಬಹುದು. ಮಳೆಯ ಹೆಚ್ಚುವರಿ ನೀರನ್ನು ಸಂರಕ್ಷಿಸುವ ಮೂಲಕ ಉತ್ತಮ ಇಳುವರಿ ಪಡೆಯಲು ಸಹಕಾರಿಯಾಗಲಿದೆ ಎಂದು ಕಂದಕ ಬದು ಕಾಮಗಾರಿಯ ಉಪಯುಕ್ತತೆಯನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟರು.
ರೈತರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬರ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಲಾಗುತ್ತಿದ್ದು, ಇನ್ನಷ್ಟು ಪ್ರದೇಶಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಅಧ್ಯಯನ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ, ಶಾಸಕರಾದ ಎಚ್.ಕೆ. ಪಾಟೀಲ, ಸಿ.ಸಿ. ಪಾಟೀಲ, ಎನ್.ಎಚ್. ಕೋನರೆಡ್ಡಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಚ್.ಎಸ್. ಜಿನಗಿ, ಸಹಾಯಕ ನಿರ್ದೇಶಕ ಕುಮಾರ ಪೂಜಾರ, ಗ್ರಾಪಂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.



