ಬೆಂಗಳೂರು:– ಪಾಕಿಸ್ತಾನ್ ಮೇಲೆ ಅನಗತ್ಯ ಯುದ್ಧ ಬೇಡ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಪಾಕ್ ಮಾಧ್ಯಮಗಳಲ್ಲಿ ಸುದ್ದಿಯಾಗಿದ್ದಾರೆ. ಪಾಕ್ ಟಿವಿಗಳಲ್ಲಿ ಸಿದ್ದರಾಮಯ್ಯ ಅವರ ಹೇಳಿಕೆ ಸುದ್ದಿಪ್ರಸಾರವಾಗಿದೆ. ಈ ಮೂಲಕ ಕರ್ನಾಟಕ ಸಿಎಂ ಈಗ ವರ್ಲ್ಡ್ ಫೇಮಸ್ ಆಗಿದ್ದಾರೆ.
ಪಾಕ್ ಮಾಧ್ಯಮಗಳಲ್ಲಿ ಸಿದ್ದು ಸುದ್ದಿ ಪ್ರಸಾರ ಆಗುತ್ತಿದ್ದಂತೆ ರಾಜ್ಯ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ X ಮಾಡಿರುವ ವಿಪಕ್ಷ ನಾಯಕ ಆರ್ ಅಶೋಕ್, ಪಾಕಿಸ್ತಾನ ರತ್ನ ಸಿಎಂ ಸಿದ್ದರಾಮಯ್ಯನವರೇ ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ಅವರಿಗೆ ಅಭಿನಂದನೆಗಳು. ಮುಂದೆಂದಾದರೂ ತಾವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರೆಂಟಿ. ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಪಾಕಿಸ್ತಾನ ಸರ್ಕಾರ ಅವರಿಗೆ ಅತ್ಯುನ್ನತ ನಾಗರೀಕ ಪ್ರಶಸ್ತಿಯಾಗಿದೆ. ನಿಶಾನ್-ಎ-ಪಾಕಿಸ್ತಾನ ಪ್ರಶಸ್ತಿ ನೀಡಿ ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಟ್ವೀಟ್ ಮೂಲಕ ಟೀಕಿಸಿದ್ದಾರೆ.
ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಎದುರಿಸುತ್ತಿರುವಾಗ, ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವಾಗ ಈ ರೀತಿ ಶತ್ರುರಾಷ್ಟ್ರದ ಕೈಗೊಂಬೆಯಂತೆ ವರ್ತಿಸುತ್ತೀರಲ್ಲ, ನಿಮ್ಮಂತಹವರು ಸಾರ್ವಜನಿಕ ಬದುಕಿನಲ್ಲಿ ಇರುವುದೇ ನಮ್ಮ ದೇಶದ ಅತ್ಯಂತ ದೊಡ್ಡ ದುರಂತ ಎಂದು ಅವರು ಕಿಡಿಕಾರಿದ್ದಾರೆ.