ಧಾರವಾಡ:- ಸಿದ್ದರಾಮಯ್ಯ ಅವರು ತಮ್ಮ ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿ ಮಾಡಿಸುತ್ತಿದ್ದಾರೆ ಎಂದು ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವಿಚಾರವಾಗಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ 5 ವರ್ಷ ನಾನು ಸಿಎಂ ಎಂದು ಹೇಳಿಕೊಂಡಿದ್ದರೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣದವರು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ಸಿಎಂ ಕುರ್ಚಿ ಉಳಿಸಿಕೊಳ್ಳುವ ರಾಜಕೀಯ ಲೆಕ್ಕಾಚಾರದಿಂದ ಜಾತಿ ಗಣತಿ ಸಾಹಸಕ್ಕೆ ಸಿದ್ದರಾಮಯ್ಯ ಕೈಹಾಕಿದ್ದಾರೆ ಎಂದು ಟೀಕಿಸಿದರು.
ಕೇಂದ್ರ ಸರ್ಕಾರ ಈಗಾಗಲೇ ಜನಗಣತಿ ನಡೆಸುವ ನಿರ್ಧಾರ ಕೈಗೊಂಡಿದೆ. ಹೀಗಾಗಿ ನಮಗೆ ಗಣತಿ ಬಗ್ಗೆ ಯಾವುದೇ ವಿರೋಧವಿಲ್ಲ. ಆದರೆ, ಈಗ ರಾಜ್ಯದಲ್ಲಿ ನಡೆಯುತ್ತಿರುವ ಸಮೀಕ್ಷೆಯಲ್ಲಿ ಅನಾವಶ್ಯಕ ಮತ್ತು ವೈಯಕ್ತಿಕ ಪ್ರಶ್ನೆಗಳನ್ನೂ ಸೇರಿಸಲಾಗಿದೆ. ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಬ್ರಾಹ್ಮಣ ಅಂದರೆ ಏನರ್ಥ? ಇದು ಹಿಂದೂಗಳನ್ನು ಮತಾಂತರ ಮಾಡಲು ಪ್ರೋತ್ಸಾಹಿಸುವ ಗಣತಿ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಷ್ಟೇ ಅಲ್ಲದೆ, ಸಮೀಕ್ಷೆಯಲ್ಲಿ ‘ಯಾವುದಾದರೂ ಸಾಮಾಜಿಕ ಸಂಘಟನೆಗೆ ಸೇರಿದ್ದೀರಾ?’ ಎಂಬ ಪ್ರಶ್ನೆಗಳನ್ನೂ ಸೇರಿಸಲಾಗಿದೆ. ಇದು ಹಿಂದೂ ಸಮಾಜವನ್ನು ವಿಭಜಿಸುವ ಪ್ರಯತ್ನ ಎಂದು ಜೋಶಿ ಆರೋಪಿಸಿದರು.