ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ದಾಖಲೆಯ 17ನೇ ಬಜೆಟ್ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಕೋನ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಅಸಮತೋಲನ ನಿವಾರಣೆಯ ಸಮಗ್ರ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತಕ್ಕೆ ಈ ಬಜೆಟ್ ಉಜ್ವಲ ಸಾಕ್ಷಿಯಾಗಿದೆ ಎಂದು ಹೇಳಿದರು. ಸಿದ್ದರಾಮಯ್ಯ ಅವರು ಬಜೆಟ್ ಗಾತ್ರವನ್ನು 4.48 ಲಕ್ಷ ಕೋಟಿ ರೂ.ಗೆ ಏರಿಸಿರುವುದು ರಚನಾತ್ಮಕ ಕ್ರಮವಾಗಿದ್ದು, ಅದಕ್ಕೆ ತಕ್ಕಂತೆ ಬಂಡವಾಳ ವೆಚ್ಚವನ್ನೂ ಘೋಷಿಸಿದ್ದಾರೆ ಎಂದು ಹೇಳಿದರು.
ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಗಲಿದ್ದು, ಅಪಾರ ಸಂಖ್ಯೆಯಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಅಭಿಪ್ರಾಯಪಟ್ಟರು.
ರೈತ ಕಲ್ಯಾಣ, ಕೈಗಾರಿಕಾ ಪ್ರಗತಿ, ಪ್ರವಾಸೋದ್ಯಮ, ನೀರಾವರಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಪ್ರಾಥಮಿಕ ಹಾಗೂ ಉನ್ನತ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಬಜೆಟ್ನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದರಿಂದ ಸುಸ್ಥಿರ ಬೆಳವಣಿಗೆಗೆ ದಾರಿ ಮಾಡಿಕೊಡಲಿದೆ ಎಂದು ಹೇಳಿದರು.
ಅದೇ ವೇಳೆ, ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಗತ್ಯವಾದ ಭೂಸ್ವಾಧೀನಕ್ಕಾಗಿ ಪ್ರತಿ ಎಕರೆ ಕೃಷಿ ಜಮೀನಿಗೆ 30 ಲಕ್ಷ ರೂ. ಹಾಗೂ ತರಿ ಜಮೀನಿಗೆ 40 ಲಕ್ಷ ರೂ. ನಿಗದಿಪಡಿಸಿರುವುದು ರೈತರಿಗೆ ಸಂದ ಜಯವಾಗಿದೆ ಎಂದು ತಿಳಿಸಿದರು. ಜೊತೆಗೆ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮುಂದಾಗಿರುವುದು ಸ್ವಾಗತಾರ್ಹ ಹೆಜ್ಜೆಯಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅಭಿಪ್ರಾಯಪಟ್ಟರು.



