ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಚಿವ ಸ್ಥಾನ ದೊರೆತಿದೆ. ನಿರೀಕ್ಷೆಯಂತೆ ಅವರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಬೆಂಗಳೂರಿನ ಲೋಕಭವನದ ಗ್ಲಾಸ್ಹೌಸ್ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಚಿವರಾಗಿ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಪ್ರಮಾಣ ಬೋಧಿಸಿದರು.
ಡಿಕೆ ಶಿವಕುಮಾರ್ ನೇತೃತ್ವದ ಮೊದಲ ಸಚಿವ ಸಂಪುಟದಲ್ಲಿ ಯತೀಂದ್ರ ಅವರಿಗೆ ಸ್ಥಾನ ನೀಡಿರುವುದು ಕಾಂಗ್ರೆಸ್ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ. ಸಮಾರಂಭದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕರು, ಶಾಸಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಪ್ರಮಾಣವಚನ ಸ್ವೀಕಾರದ ಬಳಿಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೂತನ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಹೂಗುಚ್ಛ ನೀಡಿ ಶುಭ ಹಾರೈಸಿದರು.
ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಯತೀಂದ್ರ ಬೆಂಬಲಿಗರಲ್ಲಿ ಸಂಭ್ರಮ ಮನೆ ಮಾಡಿದ್ದು, ರಾಜ್ಯ ರಾಜಕೀಯದಲ್ಲಿ ಇದು ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ.



