ಕಾರವಾರ: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿರುವ ಲೋಕಾಯುಕ್ತ,
ಮತ್ತೊಂದೆಡೆ ಬಳ್ಳಾರಿಯಲ್ಲಿ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪತ್ತೆಹಚ್ಚಿದೆ.
ಕಾರವಾರ ಲೋಕಾಯುಕ್ತ ಎಸ್‌ಪಿ ಕುಮಾರಚಂದ್ರ ಅವರ ನೇತೃತ್ವದಲ್ಲಿ ಧಾರವಾಡ ಹಾಗೂ ಕಾರವಾರ ಡಿವೈಎಸ್‌ಪಿಗಳ ಜಂಟಿ ತಂಡ ಮುಂಡಗೋಡಿನ ಎರಡು ಸರ್ಕಾರಿ ಕಚೇರಿಗಳ ಮೇಲೆ ದಾಳಿ ನಡೆಸಿತು.
ಹೆಸ್ಕಾಂ ಇಂಜಿನಿಯರ್ ಧರ್ಮರಾಜ್ ಬೆಡಸಗಾಂವ್ ಗುತ್ತಿಗೆದಾರ ಶಿವಯೋಗಿ ಕೂಡಲಮಠ ಅವರಿಂದ ₹65 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದರು.
ಇನ್ನೊಂದು ಪ್ರಕರಣದಲ್ಲಿ, ಫಾರ್ಮ್‌ಹೌಸ್‌ಗೆ ಪರವಾನಗಿ ನೀಡಲು ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಂದಾಯ ನಿರೀಕ್ಷಕ ಬಸವರಾಜ್ ಬಿಸ್ನಾಳ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಬಳ್ಳಾರಿ ಲೋಕಾಯುಕ್ತ ಎಸ್‌ಪಿ ವಾಸುದೇವರಾಮ್ ನೇತೃತ್ವದಲ್ಲಿ ಸಿರುಗುಪ್ಪ ತಾಲೂಕಿನ ಆರ್‌ಡಿಪಿಆರ್ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವ್ಯಾಸಗಾರ ತಿಪ್ಪೇಸ್ವಾಮಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಭ್ರಷ್ಟಾಚಾರ ನಿರೋಧಕ ಕಾಯ್ದೆಯಡಿ ಬೆಳ್ಳಂಬೆಳಗ್ಗೆ ದಾಳಿ ನಡೆಸಲಾಯಿತು.
ಬಳ್ಳಾರಿಯ ಹನುಮಾನ್ ನಗರ ಹಾಗೂ ಕುಡಿತಿನಿಯಲ್ಲಿರುವ ನಿವಾಸಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ ಅಧಿಕಾರಿಗಳು, ಸುಮಾರು 300 ಗ್ರಾಂ ಚಿನ್ನ, 800 ಗ್ರಾಂ ಬೆಳ್ಳಿ ಆಭರಣ, 6 ನಿವೇಶನಗಳಿಗೆ ಸಂಬಂಧಿಸಿದ ದಾಖಲೆಗಳು, ₹1 ಲಕ್ಷ ನಗದು ಪತ್ತೆಹಚ್ಚಿದರು. ಜೊತೆಗೆ ಬ್ಯಾಂಕ್ ಖಾತೆಯಲ್ಲಿದ್ದ ₹5 ಲಕ್ಷವನ್ನು ಫ್ರೀಜ್ ಮಾಡಲಾಗಿದೆ.
ಮನೆಗಳ ಮೇಲಿನ ದಾಳಿಯ ಬಳಿಕ ಸಿರುಗುಪ್ಪ ನಗರದ ಆರ್‌ಡಿಪಿಆರ್ ಕಚೇರಿಯ ಮೇಲೂ ಲೋಕಾಯುಕ್ತ ತಂಡ ದಾಳಿ ನಡೆಸಿ, ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.



