ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳ ಮೂಲಕ ಕಿರುಕುಳ ನೀಡಿದ ಪ್ರಕರಣದಲ್ಲಿ ನಟಿ ರಮ್ಯಾ ದಿವ್ಯ ಸ್ಪಂದನಾ ಬೆಂಗಳೂರಿನ 46ನೇ ಸಿಸಿಹೆಚ್ ನ್ಯಾಯಾಲಯದ ಮುಂದೆ ಇಂದು ಹಾಜರಾಗಿ ಫಿರ್ಯಾದಿ ಹೇಳಿಕೆ ದಾಖಲಿಸಿದ್ದಾರೆ.
ಸೈಬರ್ ಪೊಲೀಸರು 11 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಪ್ರಕರಣದ ವಿಚಾರಣೆ ನ್ಯಾಯಮೂರ್ತಿ ಈ. ರಾಜೀವ ಗೌಡ ಅವರ ಮುಂದೆ ಮುಚ್ಚಿದ ಕೊಠಡಿಯಲ್ಲಿ ನಡೆಯುತ್ತಿದೆ. ವಿಚಾರಣೆ ವೇಳೆ ರಮ್ಯಾ ತಮ್ಮ ವೃತ್ತಿ ಹಾಗೂ ರಾಜಕೀಯ ಜೀವನದ ಬಗ್ಗೆ ವಿವರಿಸಿ, ಆರೋಪಿಗಳು ಇನ್‌ಸ್ಟಾಗ್ರಾಂ ಮೂಲಕ ಕಳುಹಿಸಿದ್ದ ಅಸಭ್ಯ ಸಂದೇಶಗಳ ಕುರಿತು ಮಾಹಿತಿ ನೀಡಿದ್ದಾರೆ.
ನಟ ದರ್ಶನ್ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡ ಬಳಿಕ ಕೆಲವರು ರಮ್ಯಾಗೆ ಅಸಭ್ಯ ಕಾಮೆಂಟ್ ಮತ್ತು ಸಂದೇಶಗಳನ್ನು ಕಳುಹಿಸಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಪೊಲೀಸರಿಗೆ ದೂರು ನೀಡಿದ್ದರು.
ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರು ಆರೋಪಿಗಳನ್ನು ಬಂಧಿಸಿದ್ದರು. ಜೊತೆಗೆ 50ಕ್ಕೂ ಹೆಚ್ಚು ಸಾಮಾಜಿಕ ಜಾಲತಾಣ ಖಾತೆಗಳನ್ನು ಬಂದ್ ಮಾಡಲಾಗಿದೆ. ಬಂಧನ ಭಯದಿಂದ ಹಲವು ಆರೋಪಿಗಳು ಪರಾರಿಯಾಗಿದ್ದರು. ನಂತರ ಬಂಧಿತರು ಒಂದು ಲಕ್ಷ ರೂ. ಬಾಂಡ್ ನೀಡುವ ಮೂಲಕ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ.



