ಕಾರವಾರ: ರೈಲ್ವೆ ಅಂಡರ್ಬ್ರಿಡ್ಜ್ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಮಣ್ಣು ಕುಸಿದು ರೈಲ್ವೆ ಇಲಾಖೆಯ ತಾಂತ್ರಿಕ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪ ನಿನ್ನೆ ತಡರಾತ್ರಿ ನಡೆದಿದೆ.

ಅಳ್ನಾವರ–ಅಂಬೇವಾಡಿ ಸೆಕ್ಷನ್ನ ಎಲ್ಸಿ ನಂ. 11ರ ವ್ಯಾಪ್ತಿಯಲ್ಲಿ ಬರುವ ದಾಂಡೇಲಿ ತಾಲೂಕಿನ ಕರ್ಕಾ–ಬರ್ಚಿ ರೈಲ್ವೆ ಮಾರ್ಗದಲ್ಲಿ ಅಂಡರ್ಬ್ರಿಡ್ಜ್ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಕಾಮಗಾರಿಗಾಗಿ ತೆಗೆದುಹಾಕಲಾಗಿದ್ದ ಮಣ್ಣು ಏಕಾಏಕಿ ಕುಸಿದಿದೆ.
ಮಣ್ಣು ಕುಸಿದ ಪರಿಣಾಮ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ರೈಲ್ವೆ ಇಲಾಖೆಯ ತಾಂತ್ರಿಕ ಸಿಬ್ಬಂದಿ, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಾಲವಾಡಗಿ ಗ್ರಾಮದ ಮಹೇಶ ಶೇಖಪ್ಪ ತಳವಾರ (33) ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ.
ಇದೇ ವೇಳೆ ಸ್ಥಳದಲ್ಲಿದ್ದ ರೈಲ್ವೆ ಇಲಾಖೆಯ ಹಿರಿಯ ವಿಭಾಗೀಯ ಎಂಜಿನಿಯರ್ ಮಕ್ತುಂ ಹುಸೇನ್ ಮಹಮ್ಮದ್ ಹುಸೇನ್ ಮುಲ್ಲಾ (57) ಅವರಿಗೂ ಗಂಭೀರ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ಸಿಪಿಐ ಶಿವಾನಂದ ಅಂಬಿಗೇರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡ ಸಿಬ್ಬಂದಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.









