ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ಅವಳಿ ನಗರದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ.
ಇಂತಹ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ನಗರದ ಸ್ಲಂ ಪ್ರದೇಶದ ಜನರು ಹಾಗೂ ಮಧ್ಯಮ ವರ್ಗದ ಜನರು ಹನಿ ನೀರಿಗಾಗಿ ನಿತ್ಯ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ನೀರಿನ ಸಮಸ್ಯೆ ಕಂಡೂ ಕಾಣದಂತೆ ವರ್ತಿಸುತ್ತಿರುವ ನಗರಸಭೆ ಅಧ್ಯಕ್ಷರ ಮತ್ತು ಪೌರಾಯುಕ್ತರ ಕ್ರಮ ಖಂಡನೀಯ ಎಂದು ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಒಂದು ತಿಂಗಳಿಂದ ಜನರಿಗೆ ನೀರು ಸಿಗದೇ ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯ ಪ್ರಚಾರದ ಗುಂಗಿನಲ್ಲಿರುವ ನಮ್ಮ ಜನಪ್ರತಿನಿಧಿಗಳು ಜನರ ಕುಡಿಯುವ ನೀರಿನ ಸಮಸ್ಯೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ನಗರಸಭೆಯಿಂದ ಕಾಟಾಚಾರಕ್ಕಾಗಿ ನೀರಿನ ಟ್ಯಾಂಕರ್‌ಗಳನ್ನು ನಗರದ ವಾರ್ಡ್ಗಳಿಗೆ ಬಿಡುತ್ತಿದ್ದಾರೆ. ಪ್ರತಿ ವರ್ಷಕ್ಕಿಂತ ಈ ವರ್ಷದ ತಾಪಮಾನ ತುಂಬಾ ಹೆಚ್ಚು ಇರುವುದರಿಂದ ಜನರಿಗೆ ಕುಡಿಯುವ ನೀರಿನ ಅವಶ್ಯಕತೆ ಹೆಚ್ಚಾಗಿದೆ. ಕೂಡಲೇ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗದಗ-ಬೆಟಗೇರಿ ಅವಳಿ ನಗರದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಗಳಿಗೆ ಸ್ಪಂದಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಗದಗ ಜಿಲ್ಲಾ ಸ್ಲಂ ಸಮಿತಿಯ ಕಾರ್ಯದರ್ಶಿ ಅಶೋಕ ಕುಸಬಿ, ಉಪಾಧ್ಯಕ್ಷ ರವಿಕುಮಾರ ಬೆಳಮಕರ ಆಗ್ರಹಿಸಿದ್ದಾರೆ.