ವಿಜಯಸಾಕ್ಷಿ ಸುದ್ದಿ, ಧಾರವಾಡ: ಅಕ್ಟೋಬರ್ 7ರಂದು ಜಿಲ್ಲಾ ಮಟ್ಟದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸುವ ಕುರಿತು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಜರುಗಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಪ್ರತಿವರ್ಷದಂತೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಸಮಾಜ ಬಾಂಧವರ ಸಹಕಾರದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮವಹಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಅಕ್ಟೋಬರ್ 7ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಿಂದ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ಆಯೋಜಿಸಲಾಗುತ್ತದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಿ, ಮೆರವಣಿಗೆಗೆ ಮೆರಗು ನೀಡುವಂತೆ ಇಲಾಖೆಯ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದ ಮೆರವಣಿಗೆಯಲ್ಲಿ ಹೆಚ್ಚಿನ ಜನರು ಪಾಲ್ಗೊಳ್ಳುವಂತೆ ವ್ಯಾಪಕ ಪ್ರಚಾರ ಮಾಡಲು ಕ್ರಮ ವಹಿಸಬೇಕು. ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ, ಸಾಧಕರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಸತ್ಕರಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಶ್ರೀ ಮಹರ್ಷಿ ವಾಲ್ಮೀಕಿಯವರ ಕುರಿತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸುವಂತೆ ಮತ್ತು ಜಯಂತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭ ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು. ಸಭೆಯಲ್ಲಿ ಧಾರವಾಡ ತಹಸೀಲ್ದಾರ ಡಾ. ಡಿ.ಎಚ್. ಹೂಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಾಲ್ಮೀಕಿ ಸಮುದಾಯದ ಪ್ರಮುಖರು ಹಾಗೂ ಇತರ ಸಮಾಜಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ಪರಿಶಿಷ್ಟ ಪಂಗಡದ ಅಹವಾಲುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು, ಮುಂದಿನ ಜಾಗೃತಿ ಸಭೆಯಲ್ಲಿ ಚರ್ಚಿಸಿ, ಸಮಸ್ಯೆಗಳಿಗೆ ಪರಿಹಾರ ಸೂಚಿಸುವುದಾಗಿ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಸಾರ್ವಜನಿಕರ, ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ ಅಹವಾಲು, ಸಮಸ್ಯೆಗಳನ್ನು ಸ್ವೀಕರಿಸಿ ಜಿಲ್ಲಾ ಜಾಗೃತಿ ಸಭೆಯಲ್ಲಿ ಮಂಡಿಸುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.