ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಲು ಮಹತ್ವದ ಆದೇಶ ಹೊರಡಿಸಿದೆ.
ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಪ್ರದೇಶಗಳನ್ನು ಈ ಹಂತದಿಂದ ಹೊರಗಿಡಲಾಗಿದ್ದು, ಉಳಿದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರಿಷ್ಕರಣೆ ಪ್ರಕ್ರಿಯೆ ಜಾರಿಯಾಗಲಿದೆ.
ಈ ಮೂರು ಪ್ರದೇಶಗಳಲ್ಲಿ ಕಠಿಣ ಭೌಗೋಳಿಕ ಪರಿಸ್ಥಿತಿ, ಹವಾಮಾನ ಅಡಚಣೆಗಳು ಹಾಗೂ ಕಾರ್ಯಾಚರಣೆಯ ಸವಾಲುಗಳ ಹಿನ್ನೆಲೆ ಎಸ್‌ಐಆರ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ವಿಶೇಷವಾಗಿ ಹಿಮಪಾತ ಪೀಡಿತ ಹಾಗೂ ಎತ್ತರ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುವುದು ಸವಾಲಿನ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.
ಜನಗಣತಿಯ ಎರಡನೇ ಹಂತದ ಪ್ರಗತಿ ಮತ್ತು ಸ್ಥಳೀಯ ಲಾಜಿಸ್ಟಿಕ್ ವ್ಯವಸ್ಥೆಗಳನ್ನು ಪರಿಗಣಿಸಿ ಈ ಪ್ರದೇಶಗಳಿಗೆ ಪ್ರತ್ಯೇಕ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ.
ಈ ಕುರಿತು ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಮತದಾರರು ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ. ಅರ್ಹ ನಾಗರಿಕರ ಹೆಸರುಗಳು ಮಾತ್ರ ಮತದಾರರ ಪಟ್ಟಿಯಲ್ಲಿ ಉಳಿಯುವಂತೆ ನೋಡಿಕೊಳ್ಳುವುದು ಹಾಗೂ ಅನರ್ಹ ನಮೂದುಗಳನ್ನು ತಡೆಯುವುದು ಈ ಪರಿಷ್ಕರಣೆಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
ಈ ಹಂತದಲ್ಲಿ ಸುಮಾರು 36.73 ಕೋಟಿ ಮತದಾರರನ್ನು ತಲುಪುವ ಗುರಿ ಹೊಂದಲಾಗಿದೆ. ಪರಿಶೀಲನೆ ವೇಳೆ ಮೃತಪಟ್ಟವರು, ಶಾಶ್ವತವಾಗಿ ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ನೋಂದಾಯಿಸಿಕೊಂಡಿರುವ ನಕಲಿ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ.



