ಲಕ್ನೋ: ಶಾಲಾ ಪ್ರವಾಸ ಮುಗಿಸಿ ವಾಪಸಾಗುತ್ತಿದ್ದ ಮಕ್ಕಳಿದ್ದ ಬಸ್ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳು ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದಾರುಣ ಘಟನೆ ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯ ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇನಲ್ಲಿ ನಡೆದಿದೆ.
ಕನ್ನೌಜ್ ಜಿಲ್ಲೆಯ ಥಾಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಎಕ್ಸ್ಪ್ರೆಸ್ವೇನಲ್ಲಿ ಈ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಶಾಲಾ ಬಸ್ನಲ್ಲಿ ಸುಮಾರು 50 ಮಕ್ಕಳು ಹಾಗೂ ಆರು ಶಿಕ್ಷಕರಿದ್ದರು. ಮಕ್ಕಳನ್ನು ಆಗ್ರಾದಿಂದ ಕೌಶಂಬಿಗೆ ಶಾಲಾ ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು. ಪ್ರವಾಸ ಮುಗಿಸಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಿಂತಿದ್ದ ಬಸ್ಗೆ ಹಿಂದಿನಿಂದ ಟ್ರಕ್ ಡಿಕ್ಕಿ:
ಎಕ್ಸ್ಪ್ರೆಸ್ವೇನಲ್ಲಿ ಶಾಲಾ ಬಸ್ ನಿಂತಿದ್ದ ಸಂದರ್ಭದಲ್ಲಿ ಹಿಂದಿನಿಂದ ಅತಿ ವೇಗವಾಗಿ ಬಂದ ಟ್ರಕ್ ಬಸ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್ನಲ್ಲಿದ್ದ ಹಲವು ಮಕ್ಕಳು ಗಾಯಗೊಂಡಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಗಾಯಗೊಂಡ ಮಕ್ಕಳನ್ನು ಆಂಬುಲೆನ್ಸ್ಗಳ ಮೂಲಕ ತಿರ್ವಾದ ವೈದ್ಯಕೀಯ ಕಾಲೇಜಿಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ:
ಕನ್ನೌಜ್ ಜಿಲ್ಲಾಧಿಕಾರಿ ಅಶುತೋಷ್ ಮೋಹನ್ ಅಗ್ನಿಹೋತ್ರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನೋದ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಮಕ್ಕಳಿಗೆ ಅಗತ್ಯ ಚಿಕಿತ್ಸೆ ಒದಗಿಸುವಂತೆ ವೈದ್ಯರಿಗೆ ಸೂಚಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಶಾಲಾ ಪ್ರವಾಸದ ಸಂಭ್ರಮದಲ್ಲಿದ್ದ ಮಕ್ಕಳ ಕುಟುಂಬಗಳಿಗೆ ಈ ದುರ್ಘಟನೆ ಆಘಾತ ತಂದಿದೆ.









