ವಿಜಯಸಾಕ್ಷಿ ಸುದ್ದಿ, ಧಾರವಾಡ: ಧಾರವಾಡದಲ್ಲಿ 2023ರಲ್ಲಿ ಐಟಿಎಫ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ವಿವಿಧ 30 ದೇಶಗಳಿಂದ ಟೆನ್ನಿಸ್ ಆಟಗಾರರು ಈ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದರು. ಇದು ನಮ್ಮ ಧಾರವಾಡ ಜಿಲ್ಲೆಗೆ ಹೆಮ್ಮೆಯ ವಿಷಯ ಎಂದು ಸಚಿವ ಸಂತೋಷ್ ಎಸ್. ಲಾಡ್ ಹೇಳಿದರು.
ಅವರು ಶುಕ್ರವಾರ ಧಾರವಾಡ ಡಿಡಿಎಲ್‌ಟಿಎ ಆವರಣದ ರಾಜ್ಯಾಧ್ಯಕ್ಷ ಪೆವಲಿಯನ್‌ನಲ್ಲಿ ಜರುಗಿದ ರಾಜ್ಯ ಮಟ್ಟದ ಪುರುಷರ ಲಾನ್ ಟೆನ್ನಿಸ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಈ ಬಾರಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಷ್ಠಿತ ಪಂದ್ಯಾವಳಿಯಲ್ಲಿ 300ಕ್ಕೂ ಹೆಚ್ಚು ಕ್ರೀಡಾಪಟುಗಳು ಧಾರವಾಡದಿಂದ ಭಾಗವಹಿಸಿದ್ದು, ಇದು ರಾಜ್ಯದಲ್ಲಿ ಟೆನ್ನಿಸ್ ಕ್ರೀಡೆಯ ಜನಪ್ರಿಯತೆಯನ್ನು ಎತ್ತಿ ಹಿಡಿದಿದೆ ಎಂದು ತಿಳಿಸಿದರು.
ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಧಾರವಾಡವು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆಯನ್ನು ಕಾಣುತ್ತಿದೆ. ಕ್ರೀಡಾ ಕ್ಷೇತ್ರದಲ್ಲಿ ಧಾರವಾಡದ ಯುವಜನರು ಉತ್ತಮ ಸಾಧನೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಕ್ರೀಡೆಯಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.
ನಗರದ ಹೃದಯಭಾಗದಲ್ಲಿರುವ ಐತಿಹಾಸಿಕ ಜಿಮ್ ಖಾನಾ ಕ್ಲಬ್‌ನ ಸಮಗ್ರ ಜೀರ್ಣೋದ್ಧಾರ ಮತ್ತು ಅಭಿವೃದ್ಧಿಗೆ ಕ್ರಮಕೈಗೊಳ್ಳುವಂತೆ ಸಚಿವರಲ್ಲಿ ಮನವಿ ಮಾಡಿಕೊಂಡರು. ವೇದಿಕೆಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ಸದಸ್ಯ, ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಎಫ್. ಹೆಚ್. ಜಕ್ಕಪ್ಪನವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರರಾದ ಜ್ಯೋತಿ ಪಾಟೀಲ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ, ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಎಸ್. ಘಾಳಿ ಮತ್ತು ಸಂತೋಷ ಬಿರಾದಾರ ಉಪಸ್ಥಿತರಿದ್ದರು.
ಕಾರ್ಯದರ್ಶಿ ಸಂತೋಷ ಶೆಟ್ಟಿ ಸ್ವಾಗತಿಸಿದರು. ಆರತಿ ದೇವಶಿಖಾಮಣಿ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಟೆನ್ನಿಸ್ ತರಬೇತುದಾರರು, ನಿರ್ಣಾಯಕರು, ಸ್ಪರ್ಧಾಳುಗಳು, ಪಾಲಕರು ಉಪಸ್ಥಿತರಿದ್ದರು.
ಕ್ರೀಡೆಯು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅತ್ಯಗತ್ಯ. ಕ್ರೀಡಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಧಾರವಾಡ ಇದೀಗ ಟೆನ್ನಿಸ್ ಕ್ರೀಡೆಯಲ್ಲಿಯೂ ಮುಂಚೂಣಿಗೆ ಬರುತ್ತಿದೆ. ರಾಜ್ಯದ ರಾಜಧಾನಿ ಬೆಂಗಳೂರಿನ ನಂತರ ಬರೋಬ್ಬರಿ ಎಂಟು ಟೆನ್ನಿಸ್ ಕೋರ್ಟ್ಗಳನ್ನು ಹೊಂದಿರುವ ಏಕೈಕ ನಗರ ಎಂಬ ಹೆಗ್ಗಳಿಕೆಗೆ ಧಾರವಾಡ ಪಾತ್ರವಾಗಿದೆ ಎಂದು ಸಚಿವ ಸಂತೋಷ್ ಲಾಡ್ ಹೆಮ್ಮೆ ವ್ಯಕ್ತಪಡಿಸಿದರು.


