ಬೆಂಗಳೂರು: ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಸುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವ ಕುರಿತು ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಐಟಿ–ಬಿಟಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ವೇಳೆ, ಬಿಜೆಪಿ ಶಾಸಕ ಸುರೇಶ್ ಕುಮಾರ್ ಪ್ರಸ್ತಾಪಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ಇದು ಅತ್ಯಂತ ಗಂಭೀರ ಸಮಸ್ಯೆ. ಮಕ್ಕಳ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಯಂತ್ರಿಸುವ ಬಗ್ಗೆ ಸರ್ಕಾರ ಈಗಾಗಲೇ ಚರ್ಚೆ ಆರಂಭಿಸಿದೆ. ಜವಾಬ್ದಾರಿಯುತ ಬಳಕೆದಾರರು, ಎಐ ಮತ್ತು ಸಾಮಾಜಿಕ ಜಾಲತಾಣಗಳ ಕುರಿತು ಏನು ಮಾಡಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಯುತ್ತಿದೆ” ಎಂದು ಹೇಳಿದರು.
ಇದರ ಜೊತೆಗೆ ಮಾಹಿತಿ ತಂತ್ರಜ್ಞಾನ ಇಲಾಖೆ ಮೆಟಾ ಕಂಪನಿಯೊಂದಿಗೆ ಸೇರಿ ‘ಡಿಜಿಟಲ್ ಡಿಟಾಕ್ಸ್’ ಕಾರ್ಯಕ್ರಮ ನಡೆಸುತ್ತಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 3 ಲಕ್ಷ ಮಕ್ಕಳು ಹಾಗೂ 1 ಲಕ್ಷ ಶಿಕ್ಷಕರು ಭಾಗವಹಿಸಲಿದ್ದಾರೆ ಎಂದು ಪ್ರಿಯಾಂಕ ಖರ್ಗೆ ಮಾಹಿತಿ ನೀಡಿದರು. ಸರ್ಕಾರ ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ತಿಳಿಸಿದರು.
ವಿದೇಶಗಳಲ್ಲಿ ಈಗಾಗಲೇ ಹಲವು ದೇಶಗಳು ಈ ಕುರಿತು ಕ್ರಮ ಕೈಗೊಂಡಿವೆ ಎಂದು ಅವರು ಉದಾಹರಣೆ ನೀಡಿದರು. ಫಿನ್‌ಲ್ಯಾಂಡ್‌ನಲ್ಲಿ ಕ್ರಮ ಜಾರಿಯಲ್ಲಿದ್ದು, ಇಂಗ್ಲೆಂಡ್ ಕೂಡ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಯಂತ್ರಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ. ಆಸ್ಟ್ರೇಲಿಯಾ ಎರಡು ತಿಂಗಳ ಹಿಂದೆ 16 ವರ್ಷ ವಯಸ್ಸಿನೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದಕ್ಕೆ ನಿರ್ಬಂಧ ಹೇರಿದೆ. ನಾವೂ ರಾಜ್ಯದಲ್ಲಿ ಎಐ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆಗೆ ಸಂಬಂಧಿಸಿದಂತೆ ಯಾವ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿದರು.
ಇದಕ್ಕೂ ಮೊದಲು ಮಾತನಾಡಿದ ಸುರೇಶ್ ಕುಮಾರ್, ಆಸ್ಟ್ರೇಲಿಯಾದಲ್ಲಿ 16 ವರ್ಷ ವಯಸ್ಸಿನೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ಹೇರಿರುವುದನ್ನು ಉಲ್ಲೇಖಿಸಿದರು. ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ಅಪಾಯಕಾರಿ ಪರಿಸ್ಥಿತಿಗೆ ಕಾರಣವಾಗುತ್ತಿದೆ ಎಂದು ಅವರು ಎಚ್ಚರಿಸಿದರು. ಕೇಂದ್ರ ಸರ್ಕಾರ ಇತ್ತೀಚೆಗೆ ಮಂಡಿಸಿದ ಆರ್ಥಿಕ ಸಮೀಕ್ಷೆಯಲ್ಲೂ ಮಕ್ಕಳ ಮೇಲೆ ಸಾಮಾಜಿಕ ಜಾಲತಾಣಗಳ ಎಕ್ಸ್‌ಪೋಜರ್ ಮತ್ತು ಅದರ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಲಾಗಿದೆ ಎಂದು ಹೇಳಿದರು.



