ಬೆಂಗಳೂರು:- ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಕರ್ನಾಟಕ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಬುಧವಾರ ತಿಳಿಸಿದ್ದಾರೆ.
ನಗರ ಪ್ರದೇಶಗಳಲ್ಲಿನ ಆಸ್ತಿಗಳಿಗೆ ಎ ಖಾತಾ ಮತ್ತು ಅನಧಿಕೃತ ಬಡಾವಣೆಗಳ ಸೈಟ್ಗಳಿಗೆ ಬಿ ಖಾತಾ ನೀಡಲು ನಿಗದಿಪಡಿಸಿದ್ದ ಮೂರು ತಿಂಗಳ ಕಾಲಾವಕಾಶವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಿಸಲಾಗಿದೆ. ಮೇ 10 ರ ಗಡುವು ಮುಕ್ತಾಯಗೊಂಡ ಬೆನ್ನಲ್ಲೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಅನಧಿಕೃತ ಬಡಾವಣೆಗಳಲ್ಲಿನ ಆಸ್ತಿಗಳಿಗೆ ಬಿ-ಖಾತಾ ನೀಡಲು ಮತ್ತು ಅವುಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರಲು ಒಂದು ಬಾರಿಗೆ ಅವಕಾಶ ನೀಡುವಂತೆ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದರು. ಈ ಮೂಲಕ ಸರ್ಕಾರಕ್ಕೆ ಸುಮಾರು 3,500 ಕೋಟಿ ರೂ. ಆದಾಯ ಸಂಗ್ರಹವಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಮೊದಲ 3 ತಿಂಗಳ ಅವಧಿಯಲ್ಲಿ ನಿರೀಕ್ಷಿತ ಗುರಿ ಸಾಧನೆಯಾಗಿಲ್ಲ.
ನೂತನ ಯೋಜನೆಯಡಿ ಇದುವರೆಗೆ 10 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಅದರಲ್ಲಿ 2 ಲಕ್ಷ ಆಸ್ತಿ ಮಾಲೀಕರು ಬಿ-ಖಾತಾ ಪಡೆದಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ ನೀಡಿದ್ದಾರೆ. ಉಳಿದ ಅರ್ಜಿಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಮತ್ತು ಅರ್ಹ ಮಾಲೀಕರಿಗೆ ಬಿ-ಖಾತಾ ಸಿಗುತ್ತದೆ ಎಂದು ಅವರು ಹೇಳಿದ್ದಾರೆ. ಅಕ್ರಮ ಲೇಔಟ್ಗಳಲ್ಲಿ ಅಂದಾಜು 30 ಲಕ್ಷ ಆಸ್ತಿಗಳಿವೆ ಎಂದು ಅವರು ತಿಳಿಸಿದ್ದಾರೆ.