ವಿಜಯಸಾಕ್ಷಿ ಸುದ್ದಿ, ರೋಣ: ರಾಜ್ಯ ಯುವ ಕಾಂಗ್ರೆಸ್ ಸಮಿತಿಗೆ ಚುನಾವಣೆ ಮೂಲಕ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮಾ.17ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು, ಮತಕ್ಷೇತ್ರದಿಂದ ಹೆಚ್ಚಿನ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಬೇಕು ಎಂದು ಅಧ್ಯಕ್ಷ ಮುತ್ತು ನವಲಗುಂದ ಹೇಳಿದರು.
ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷ ಈ ಬಾರಿ ಚುನಾವಣೆ ಮೂಲಕ ಪದಾಧಿಕಾರಿಗಳ ಆಯ್ಕೆ ಕಾರ್ಯವನ್ನು ಮಾಡಿತ್ತು. ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದು, ನೂತನವಾಗಿ ಆಯ್ಕೆಗೊಂಡ ಎಲ್ಲ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಕೂಡ ಇದೇ ಸಂದರ್ಭದಲ್ಲಿ ನಡೆಯಲಿದೆ. ಪಕ್ಷದ ಯುವ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ರಾಜ್ಯದಲ್ಲಿಯೇ ಅತಿ ಹೆಚ್ಚು ಮತಗಳನ್ನು ಪಡೆದು ಯುವ ಕಾಂಗ್ರೆಸ್ ಸಮಿತಿಗೆ ರಾಜ್ಯ ಕಾರ್ಯದರ್ಶಿಯಾಗಿ ನೇಮಕವಾಗಿರುವ ಯುವ ನಾಯಕ ಅಕ್ಷಯ ಪಾಟೀಲರ ಮುಖಂಡತ್ವದಲ್ಲಿ ಮತಕ್ಷೇತ್ರದ ಪಕ್ಷದ ಕಾರ್ಯಕರ್ತರು ಸಮಾವೇಶಕ್ಕೆ ತೆರಳಬೇಕು ಎಂದ ಅವರು, ಇದೊಂದು ಐತಿಹಾಸಿಕ ಸಮಾವೇಶವಾಗಿದೆ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಕಳಸಣ್ಣವರ, ಮತಕ್ಷೇತ್ರದ ಉಪಾಧ್ಯಕ್ಷ ಗೋಪಿ ರಾಯನಗೌಡ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆನಂದ ರಾಠೋಡ, ಉಪಾಧ್ಯಕ್ಷ ಸೋಮು ನಾಗರಾಜ, ಯುವ ಮುಖಂಡ ಸೈಫ್ ತಹಸೀಲ್ದಾರ ಉಪಸ್ಥಿತರಿದ್ದರು.