ನವದೆಹಲಿ: ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಗೊಂದಲಗಳಿಗೆ ಸಂಬಂಧಿಸಿದಂತೆ ಹೈಕಮಾಂಡ್ ನಾಯಕರು ತಾರ್ಕಿಕ ನಿರ್ಧಾರಕ್ಕೆ ಬಂದಿದ್ದಾರೆ. ಶೀಘ್ರದಲ್ಲೇ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಮಾಜಿ ಸಚಿವ ಕೆ.ಎನ್. ರಾಜಣ್ಣ ಜೊತೆಗೆ ಭೇಟಿ ಮಾಡಿ ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ಮಾಡಿದ್ದು, ಗೊಂದಲಗಳನ್ನು ಶೀಘ್ರ ಇತ್ಯರ್ಥ ಪಡಿಸುವಂತೆ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಹೈಕಮಾಂಡ್ ಶೀಘ್ರ ಗೊಂದಲ ಪರಿಹಾರ ಮಾಡುವ ಭರವಸೆ ನೀಡಿದೆ. ಮುಖ್ಯಮಂತ್ರಿ ಬದಲಾವಣೆ ಅಥವಾ ಇತರೆ ಯಾವುದೇ ನಿರ್ಧಾರ ಕುರಿತಾಗಿ ಸ್ಪಷ್ಟ ಮಾಹಿತಿ ಇಲ್ಲ. ಒಟ್ಟಿನಲ್ಲಿ ಅಂತಿಮ ತೀರ್ಮಾನಕ್ಕೆ ಬರಬೇಕು ಎಂದು ತಿಳಿಸಿದ್ದೇವೆ. ಆದಷ್ಟು ಬೇಗ ಎಲ್ಲವೂ ಸರಿಯಾಗುವ ವಿಶ್ವಾಸವಿದೆ ಎಂದು ಜಾರಕಿಹೊಳಿ ಹೇಳಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತಾಗಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.



