ಬೆಂಗಳೂರು: ಕಾಳಸಂತೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಮಾರಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ವಾಣಿಜ್ಯ ಸಿಲಿಂಡರ್ ಅವ್ಯವಹಾರ ಕುರಿತು ಪ್ರತಿಕ್ರಿಯಿಸಿ, ಈಗಾಗಲೇ ಡಿಜಿಪಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು. ಕಾಳಸಂತೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಮಾರಾಟವಾಗುತ್ತಿರುವ ಬಗ್ಗೆ ಸರ್ಕಾರ ಗಂಭೀರವಾಗಿ ಗಮನಹರಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ನಗರ ಪೊಲೀಸ್ ಆಯುಕ್ತರು ಈ ಸಂಬಂಧ ವಿಶೇಷ ತಂಡವನ್ನು ರಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಶಾಸಕರು ದೆಹಲಿಗೆ ತೆರಳುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜಕೀಯದಲ್ಲಿ ಹುದ್ದೆಗಳ ಬಗ್ಗೆ ಆಸೆ ಇರುವುದು ಸಹಜ ಎಂದು ಹೇಳಿದರು. ಪ್ರತಿಯೊಬ್ಬರೂ ಶಾಸಕನಾಗಬೇಕು, ಸಚಿವನಾಗಬೇಕು ಎಂಬ ಆಶಯ ಹೊಂದಿರುತ್ತಾರೆ. ರಾಜಕಾರಣದಲ್ಲೂ ಸರ್ಕಾರಿ ಸೇವೆಯಂತೆ ಹಂತ ಹಂತವಾಗಿ ಅವಕಾಶಗಳು ಬರುತ್ತವೆ ಎಂದು ಹೇಳಿದರು.
ಶಾಸಕ ಇಕ್ಬಾಲ್ ಹುಸೇನ್ ಅವರನ್ನು ಪಕ್ಷದಿಂದ ಹೊರಗಿಡಬೇಕೆಂಬ ಒತ್ತಾಯ ಕುರಿತು ಮಾತನಾಡಿದ ಅವರು, ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ಹೇಳಬಹುದು. ಆದರೆ ಪಕ್ಷದ ಮಿತಿ ಮೀರಿ ಹೇಳಿಕೆ ನೀಡಿದರೆ ವರಿಷ್ಠರು ಗಮನಿಸಿ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಟಿಕೆಟ್ ನೀಡುವ ವಿಚಾರವೂ ಇರುವುದರಿಂದ ಎಲ್ಲರೂ ಎಚ್ಚರಿಕೆಯಿಂದ ಅಭಿಪ್ರಾಯ ವ್ಯಕ್ತಪಡಿಸಬೇಕು ಎಂದು ತಿಳಿಸಿದರು.



