ಹಮೀರ್‌ಪುರ: ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ಬೀಸಿದ ಭಾರೀ ಬಿರುಗಾಳಿಗೆ ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಕನಿಷ್ಠ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಬೆಟ್ವಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಕಂದೌರ್-ಮೊರಕಂದರ್ ಸೇತುವೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನಿರ್ಮಾಣ ಕಾರ್ಯ ನಡೆಯುತ್ತಿರುವ ವೇಳೆ ಬಲವಾದ ಗಾಳಿ ಬೀಸಿದ ಪರಿಣಾಮ ಸೇತುವೆಯ ಸ್ಲ್ಯಾಬ್ ಹಾಗೂ ಪಿಯರ್ ಭಾಗಗಳು ಸ್ಕ್ಯಾಫೋಲ್ಡಿಂಗ್ ರಚನೆಯೊಂದಿಗೆ ಏಕಾಏಕಿ ಕುಸಿದು ಬಿದ್ದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ತಂಡಗಳು ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ.



