ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜೂಜು, ಇಸ್ಪೀಟ್ ಮತ್ತಿತರ ಆಟಗಳನ್ನು ಆಡಿದರೆ, ಅಕ್ರಮ ಚಟುವಟಿಕೆಗಳನ್ನು ನಡೆಸಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ನರೇಗಲ್ಲ ಪೊಲೀಸ್ ಠಾಣೆಯ ಪಿಎಸ್‌ಐ ಐಶ್ವರ್ಯಾ ನಾಗರಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಈ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ದೀಪಾವಳಿ ಪೂಜೆಯ ನಂತರ ಬಹಳಷ್ಟು ಜನ ದೀಪ ಕಾಯುವ ನೆಪದಲ್ಲಿ ಇಸ್ಪೀಟ್ ಮತ್ತಿತರ ಜೂಜಾಟಗಳನ್ನು ಆಡುವುದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಇಸ್ಪೀಟ್ ಆಡಿಸುವವರ ಮತ್ತು ಆಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು. ಆದ್ದರಿಂದ ನರೇಗಲ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕರು ಈ ಪ್ರಕಟಣೆಯನ್ನು ಗಂಭೀರವಾಗಿ ಪರಿಗಣಿಸಿ, ಜಾಗರೂಕರಾಗಿರಬೇಕೆಂದು ತಿಳಿಸಲಾಗಿದೆ.