ವಿಜಯಸಾಕ್ಷಿ ಸುದ್ದಿ, ಧಾರವಾಡ: ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆ ಹಾಗೂ ಜೀವನದ ಗುಣಮಟ್ಟ ಸುಧಾರಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳು ಅನೇಕ ರೀತಿಯ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಇತರ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಮಹಿಳೆಯರ ಸಮೃದ್ಧ ಜೀವನಕ್ಕೆ ಶ್ರಮಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.
ಸರ್ಕಾರ ಮತ್ತು ನ್ಯಾಯಾಲಯ ನೀಡಿರುವ ಸೂಚನೆಯಂತೆ ಮಕ್ಕಳ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಎಲ್ಲ ಇಲಾಖೆಗಳು ಕೂಡಿ ನೂರು ದಿನಗಳ ಅರಿವು ಕಾರ್ಯಕ್ರಮಕ್ಕೆ ಕ್ರಿಯಾ ಯೋಜನೆ ರೂಪಿಸಿ, ಕ್ರಮ ವಹಿಸಬೇಕು. ಸಾರ್ವಜನಿಕರಲ್ಲಿ ಮಹಿಳೆ ಮತ್ತು ಮಕ್ಕಳ ಕುರಿತು ಅನುಷ್ಠಾನದಲ್ಲಿರುವ ಕಾಯ್ದೆ, ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸಲು ನೂರು ದಿನಗಳ ಅರಿವು ಕಾರ್ಯಕ್ರಮ ಸಹಾಯಕವಾಗಲಿದೆ ಎಂದು ಹೇಳಿದರು.
ಇಲಾಖೆಯಿಂದ ಹಮ್ಮಿಕೊಳ್ಳುವ ಜಾಗೃತಿ ಕಾರ್ಯಕ್ರಮಗಳನ್ನು ಕೇವಲ ಇಲಾಖೆಯ ಅನುಕೂಲಕ್ಕೆ ತಕ್ಕಂತೆ ನಡೆಸದೇ, ಹೆಚ್ಚು ಪ್ರಕರಣಗಳು ವರದಿಯಾಗುವ ನಿರ್ದಿಷ್ಟ ಪ್ರದೇಶಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿಗಳು ಹೇಳಿದರು.
ಬಾಲ್ಯವಿವಾಹ ತಡೆಗಟ್ಟುವುದು ಕೇವಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಜವಾಬ್ದಾರಿ ಎಂದು ಭಾವಿಸಿ ಸುಮ್ಮನಿರಬಾರದು. ಬಾಲ್ಯವಿವಾಹ ನಡೆಯುತ್ತಿರುವ ಮಾಹಿತಿ ಯಾರಿಗೆ ಮೊದಲು ತಿಳಿಯುತ್ತದೆಯೋ, ಅವರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಮದುವೆ ತಡೆಯಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಸಬಲೀಕರಣಕ್ಕಾಗಿ ಏಕೀಕೃತ ಯೋಜನೆ ಆಗಿರುವ ಮಿಷನ್ ಶಕ್ತಿ-ಸಮಗ್ರ ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕೆಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಡಾ. ಎಚ್.ಎಚ್. ಕುಕನೂರ ಸ್ವಾಗತಿಸಿ, ಸಭೆ ನಿರ್ವಹಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಅಧಿಕಾರಿಗಳು, ಮಕ್ಕಳ ರಕ್ಷಣಾ ಘಟಕ ಸೇರಿದಂತೆ ಮಕ್ಕಳ ವಿವಿಧ ಕಾರ್ಯಕ್ರಮಗಳ ನಿರ್ವಾಹಕರು ಭಾಗವಹಿಸಿದ್ದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್. ದೊಡ್ಡಮನಿ ಮಾತನಾಡಿ, ಕಾನೂನು ಸೇವಾ ಪ್ರಾಧಿಕಾರವು ಮಹಿಳೆ ಮತ್ತು ಮಕ್ಕಳ ಸುರಕ್ಷತೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವಿಶೇಷವಾಗಿ ಕಾರ್ಯಮಾಡುತ್ತಿದೆ. ಇಲಾಖಾ ಸಿಬ್ಬಂದಿ ಮತ್ತು ಅಧಿಕಾರಿಗಳಲ್ಲಿ ಕಾನೂನು ಅರಿವು ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.



