ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಹೆಸರಿನಲ್ಲಿ ಸರ್ಕಾರಿ ಶಾಲೆಗಳ ಆಡಳಿತ ಹಾಗೂ ಶಿಕ್ಷಣ ವ್ಯವಸ್ಥೆಗೆ ಕಾರ್ಪೊರೇಟ್ ಹಸ್ತಕ್ಷೇಪಕ್ಕೆ ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ಇತ್ತೀಚಿನ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಉಳಿಸಿ ರಾಜ್ಯ ಸಮಿತಿ ಹಾಗೂ ಎಐಡಿಎಸ್ಓ ಎಚ್ಚರಿಕೆ ನೀಡಿವೆ.
ಈ ಕುರಿತು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ರಾಜ್ಯ ಸಮಿತಿಯ ಅಧ್ಯಕ್ಷ ಪ್ರೊ. ಎ. ಮುರಿಗೆಪ್ಪ, ಹಿರಿಯ ಚಿಂತಕ ಡಾ. ಕೆ. ಮರುಳಸಿದ್ದಪ್ಪ, ಸಂಸ್ಕೃತಿ ಚಿಂತಕ ಪ್ರೊ. ಎಸ್.ಜಿ. ಸಿದ್ದರಾಮಯ್ಯ, ಹಿರಿಯ ಸಾಹಿತಿ ಹಾಗೂ ರಾಜ್ಯ ಸಮಿತಿಯ ಅಧ್ಯಕ್ಷ ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ., ಹಿರಿಯ ಸಾಹಿತಿಗಳಾದ ಡಾ. ಮಾಲತಿ ಪಟ್ಟಣಶೆಟ್ಟಿ ಮತ್ತು ಡಾ. ಹೇಮಾ ಪಟ್ಟಣಶೆಟ್ಟಿ, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಸಬಿಹಾ ಭೂಮಿಗೌಡ, ಹಿರಿಯ ಹೋರಾಟಗಾರ ಎಸ್.ಆರ್. ಹಿರೇಮಠ, ಲೇಖಕಿ ರೂಪ ಹಾಸನ, ಸಾಮಾಜಿಕ ಹೋರಾಟಗಾರ ಉಗ್ರನರಸಿಂಹೇಗೌಡ, ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಕಿರಣ ಗಾಜನೂರು, ಹಿರಿಯ ಕನ್ನಡಪರ ಹೋರಾಟಗಾರ ಅಶೋಕ್ ಚಂದರಗಿ, ಎಐಡಿಎಸ್ಓ ರಾಜ್ಯಾಧ್ಯಕ್ಷ ಅಶ್ವಿನಿ ಕೆ.ಎಸ್. ಹಾಗೂ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಸಹಿ ಹಾಕಿದ್ದಾರೆ.
ಜೂನ್ 18, 2026ರಂದು ಹೊರಡಿಸಿರುವ ಸರ್ಕಾರಿ ಆದೇಶದ ಮೂಲಕ ರಾಜ್ಯದ 1,000 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಮೇಲ್ದರ್ಜೆಗೆ ಏರಿಸುವ ನೆಪದಲ್ಲಿ ಕಾರ್ಪೊರೇಟ್ ಕಂಪನಿಗಳಿಗೆ ಶಾಲಾ ಆಡಳಿತ, ಪಠ್ಯಕ್ರಮ ಹಾಗೂ ಬೋಧನಾ ಪ್ರಕ್ರಿಯೆಯಲ್ಲೇ ಹಸ್ತಕ್ಷೇಪಕ್ಕೆ ಅವಕಾಶ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ಆರೋಪಿಸಲಾಗಿದೆ.
ಖಾಸಗಿ ಸಂಸ್ಥೆಗಳಿಗೆ ಶಿಕ್ಷಕರ ನೇಮಕ, ಕೌಶಲ್ಯಾಧಾರಿತ ಪಠ್ಯಕ್ರಮ ರೂಪಿಸುವ ಅಧಿಕಾರ ನೀಡುವುದು, ಸರ್ಕಾರಿ ಶಾಲೆಗಳಲ್ಲಿ ಸಹ-ಬ್ರ್ಯಾಂಡಿಂಗ್‌ಗೆ ಅವಕಾಶ ಕಲ್ಪಿಸುವುದು ಹಾಗೂ ಶಾಲಾ ಆಡಳಿತ ಮಂಡಳಿಯಲ್ಲಿ ಕಾರ್ಪೊರೇಟ್ ಪ್ರತಿನಿಧಿಗಳನ್ನು ಸೇರಿಸುವುದು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಗೆ ಮಾರಕವಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸರ್ಕಾರ ಶಿಕ್ಷಣದ ಸಾಂವಿಧಾನಿಕ ಜವಾಬ್ದಾರಿಯಿಂದ ಹಿಂದೆ ಸರಿಯದೆ, ಸಿಎಸ್ಆರ್ ಮಾರ್ಗಸೂಚಿಗಳನ್ನು ತಕ್ಷಣ ಹಿಂಪಡೆಯಬೇಕು. ರಾಜ್ಯ ಶಿಕ್ಷಣ ನೀತಿ ಆಯೋಗದ ವರದಿಯನ್ನು ಸಾರ್ವಜನಿಕಗೊಳಿಸಿ ಶಿಕ್ಷಣ ತಜ್ಞರು, ಸಾಹಿತಿಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಬೇಕು. ಶಿಕ್ಷಣಕ್ಕೆ ಅಗತ್ಯ ಅನುದಾನವನ್ನು ಬಜೆಟ್‌ನಲ್ಲಿಯೇ ಒದಗಿಸಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಲಾಗಿದೆ.
“ಸಾರ್ವಜನಿಕ ಶಿಕ್ಷಣವನ್ನು ಕಾರ್ಪೊರೇಟ್ ಕಂಪನಿಗಳ ವಶಕ್ಕೆ ಒಪ್ಪಿಸುವ ಯಾವುದೇ ಪ್ರಯತ್ನವನ್ನು ಸಹಿಸಲಾಗುವುದಿಲ್ಲ. ಸರ್ಕಾರ ಆದೇಶ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಶಿಕ್ಷಣ ಪ್ರೇಮಿಗಳೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು.”



