ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಎಸ್.ಟಿ.ಪಿ.ಎಂ.ಬಿ. ಕಲಾ ಹಾಗೂ ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ಹಾಗೂ ನೂತನ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಮಂಗಳವಾರ ಯಶಸ್ವಿಯಾಗಿ ನಡೆಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷೆ, ಉಪಾಧ್ಯಕ್ಷೆ, ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಿಗೆ ವಿದ್ಯಾರ್ಥಿನಿಯರು ಉತ್ಸಾಹದಿಂದ ಸ್ಪರ್ಧಿಸಿದರು. ಮತದಾನದ ವೇಳೆ ವಿದ್ಯಾರ್ಥಿನಿಯರು ಶಿಸ್ತುಬದ್ಧವಾಗಿ ಸರದಿಯಲ್ಲಿ ನಿಂತು ಮತ ಚಲಾಯಿಸಿದ್ದು, ಕಾಲೇಜು ಆಡಳಿತ ಮಂಡಳಿ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಿತು.
ಮತ ಎಣಿಕೆ ಬಳಿಕ ವಿಜೇತ ಅಭ್ಯರ್ಥಿಗಳನ್ನು ಘೋಷಿಸಲಾಯಿತು. ಪ್ರಾಂಶುಪಾಲ ವಿಜಯಕುಮಾರ ಬಿಳೆಯಲಿ ಹಾಗೂ ಉಪನ್ಯಾಸಕರು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಕಾಲೇಜಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಸ್ನೇಹಾ ಮಾಲಿಗೌಡ್ರ, ಲಕ್ಷ್ಮಿ ಪಾಟೀಲ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.



