ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಹಗರಣದ ವಿರುದ್ಧ ಇದೀಗ ವಿದ್ಯಾರ್ಥಿಗಳೇ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಜೆನ್-ಝೀ ಮಾದರಿಯ ಹೋರಾಟಕ್ಕೆ ಯುವಕರು ಮುಂದಾಗಿದ್ದು, ಕೆಪಿಎಸ್ಸಿ ಅಕ್ರಮದ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ.
ಕೆಪಿಎಸ್ಸಿ ನೇಮಕಾತಿ ಅಕ್ರಮದ ಕುರಿತು ಅಪರಾಧ ತನಿಖಾ ಇಲಾಖೆ (CID) ತನಿಖೆ ನಡೆಸುತ್ತಿರುವ ನಡುವೆಯೇ ವಿದ್ಯಾರ್ಥಿಗಳು ಸ್ವತಃ ಪ್ರತಿಭಟನೆಗೆ ಮುಂದಾಗಿರುವುದು ಗಮನ ಸೆಳೆದಿದೆ. ದೆಹಲಿಯಲ್ಲಿ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಯ ಮಾದರಿಯಲ್ಲಿ ಈ ಹೋರಾಟ ನಡೆಸಲು ವಿದ್ಯಾರ್ಥಿ ಸಂಘಟನೆಗಳು ಸಿದ್ಧತೆ ನಡೆಸಿವೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಇದೇ ತಿಂಗಳ ಎರಡನೇ ವಾರದಿಂದ ಪ್ರತಿಭಟನೆ ಆರಂಭವಾಗುವ ಸಾಧ್ಯತೆ ಇದ್ದು, ವಿವಿಧ ವಿದ್ಯಾರ್ಥಿ ಸಂಘಟನೆಗಳು ಹೋರಾಟಕ್ಕೆ ಸಜ್ಜಾಗಿವೆ. ಪ್ರಮುಖವಾಗಿ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಅಕ್ರಮದ ಕುರಿತು ಸಮಗ್ರ ತನಿಖೆಗೆ ಆಗ್ರಹಿಸುವುದರ ಜೊತೆಗೆ, ಪರೀಕ್ಷೆಯನ್ನು ಮರು ನಡೆಸಬೇಕು ಎಂಬ ಬೇಡಿಕೆಯನ್ನು ವಿದ್ಯಾರ್ಥಿಗಳು ಮುಂದಿಡಲಿದ್ದಾರೆ.
ಪಶುವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಕೆಪಿಎಸ್ಸಿಯ ಪರೀಕ್ಷಾ ಪ್ರಕ್ರಿಯೆಯಲ್ಲೇ ಅಕ್ರಮ ನಡೆದಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಕ್ರಮದ ವಿರುದ್ಧ ಧ್ವನಿ ಎತ್ತಲು ವಿದ್ಯಾರ್ಥಿಗಳು ಹಾಗೂ ಪರೀಕ್ಷಾರ್ಥಿಗಳು ಬೀದಿಗಿಳಿಯಲು ನಿರ್ಧರಿಸಿದ್ದಾರೆ.
ಪರೀಕ್ಷಾರ್ಥಿಗಳು ಈಗಾಗಲೇ ಮರುಪರೀಕ್ಷೆ ನಡೆಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಇದೀಗ ಸರ್ಕಾರದ ಮೇಲೆ ಮತ್ತಷ್ಟು ಒತ್ತಡ ಹೇರಲು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಮರುಪರೀಕ್ಷೆ ನಡೆಸಿ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂಬುದು ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯಾಗಿದೆ.
ಈ ನಡುವೆ ಕೆಪಿಎಸ್ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಮುಂದುವರಿಸಿದ್ದು, ಅಕ್ರಮದ ಹಿಂದೆ ಯಾರು ಭಾಗಿಯಾಗಿದ್ದಾರೆ ಎಂಬುದನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.



