ವಿಜಯಸಾಕ್ಷಿ ಸುದ್ದಿ, ಗದಗ: ವಿಬಿಜಿ ರಾಮ್ಜಿ ಯೋಜನೆಯಡಿ ಇನ್ನೂ ನೋಂದಣಿಯಾಗದ ಕೂಲಿಕಾರರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಹೊಸ ಜಾಬ್ ಕಾರ್ಡ್ ಪಡೆದುಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ನಿರ್ದೇಶಕ (ವಿಬಿಜಿ ರಾಮ್ಜಿ) ಕುಮಾರ ಪುಜಾರ ಕರೆ ನೀಡಿದರು.
ತಾಲೂಕಿನ ಲಕ್ಕುಂಡಿ ಗ್ರಾಮದ ದಂಡಿನ ದುರ್ಗಾದೇವಿ ಕೆರೆಯಿಂದ ಮೊಟ ಬಸಪ್ಪ ಗುಡಿಯವರೆಗೆ ನೀರು ಹರಿಯುವ ಕೋಡಿ ಅಭಿವೃದ್ಧಿ ಕಾಮಗಾರಿಯ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ‘ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ)’ ಕಾಯ್ದೆಯ ಐಇಸಿ ಚಟುವಟಿಕೆಯಡಿ ಹಮ್ಮಿಕೊಂಡಿದ್ದ ಜಾಬ್ ಕಾರ್ಡ್ ಮೇಳದ ಅಂಗವಾಗಿ ನಡೆದ ಸಭೆಯಲ್ಲಿ ಮಾತನಾಡಿದರು.
ವಿಬಿಜಿ ರಾಮ್ಜಿ ಯೋಜನೆಯಡಿ ಗ್ರಾಮೀಣ ಜನರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸಕ್ಕೆ ಹಾಜರಾಗಬೇಕು. ಜೊತೆಗೆ ಯೋಜನೆಯಡಿ ಲಭ್ಯವಿರುವ ವೈಯಕ್ತಿಕ ಕಾಮಗಾರಿಗಳ ಸೌಲಭ್ಯವನ್ನೂ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಗ್ರಾಮೀಣ ಕೂಲಿಕಾರರಿಗೆ ಆದ್ಯತೆಯ ಮೇರೆಗೆ ಶೇ.100ರಷ್ಟು ಉದ್ಯೋಗ ಒದಗಿಸುವ ಉದ್ದೇಶದಿಂದ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಹಂತದಲ್ಲಿ ಕ್ರಿಯಾ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಕುಮಾರ ಪುಜಾರ ಹೇಳಿದರು.
ಜಾಬ್ ಕಾರ್ಡ್ ಮೇಳದ ಮೂಲಕ ಈಗಾಗಲೇ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಜನರು ಹೊಸ ಜಾಬ್ ಕಾರ್ಡ್ಗಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಕೆಲ ಕುಟುಂಬಗಳಲ್ಲಿ ಕುಟುಂಬ ವಿಭಜನೆ ಸೇರಿದಂತೆ ವಿವಿಧ ತಾಂತ್ರಿಕ ಸಮಸ್ಯೆಗಳು ಹಾಗೂ ಕುಂದುಕೊರತೆಗಳಿದ್ದು, ಅವುಗಳಿಗೆ ಹಂತ ಹಂತವಾಗಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮೀರ್ ನಾಯಕ ಮಾತನಾಡಿ, ಜಾಬ್ ಕಾರ್ಡ್ ಹೊಂದಿರುವ ಪ್ರತಿಯೊಂದು ಗ್ರಾಮೀಣ ಕುಟುಂಬವು ವರ್ಷದಲ್ಲಿ 125 ದಿನಗಳ ಉದ್ಯೋಗ ಪಡೆಯುವ ಕಾನೂನುಬದ್ಧ ಹಕ್ಕನ್ನು ಹೊಂದಿದೆ ಎಂದು ತಿಳಿಸಿದರು.
ಉದ್ಯೋಗಕ್ಕಾಗಿ ದೂರದ ಊರುಗಳಿಗೆ ವಲಸೆ ಹೋಗಿ ಕಷ್ಟ-ನಷ್ಟ ಅನುಭವಿಸುವ ಅಗತ್ಯವಿಲ್ಲ. ತಮ್ಮ ಸ್ವಂತ ಗ್ರಾಮದಲ್ಲಿಯೇ ವಿಬಿಜಿ ರಾಮ್ಜಿ ಯೋಜನೆಯಡಿ ನಡೆಯುವ ಕಾಮಗಾರಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದು ಸಲಹೆ ನೀಡಿದರು.
ತಾಲೂಕು ಪಂಚಾಯಿತಿಯ ಐಇಸಿ ಸಂಯೋಜಕ ವೀರೇಶ ಬಸನಗೌಡ್ರ, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವಿಬಿಜಿ ರಾಮ್ಜಿ ಯೋಜನೆಯಡಿ ಇನ್ನೂ ನೋಂದಣಿಯಾಗದ ಕೂಲಿಕಾರರು ಅಗತ್ಯ ದಾಖಲೆಗಳನ್ನು ಗ್ರಾಮ ಪಂಚಾಯಿತಿಗೆ ಸಲ್ಲಿಸಿ ಜಾಬ್ ಕಾರ್ಡ್ ಪಡೆದುಕೊಳ್ಳಬೇಕು. ಉದ್ಯೋಗದ ಹಕ್ಕನ್ನು ಬಳಸಿಕೊಂಡು ತಮ್ಮ ಊರಿನಲ್ಲಿಯೇ ಕೆಲಸ ಮಾಡಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು.
– ಕುಮಾರ ಪುಜಾರ, ತಾಪಂ ನಿರ್ದೇಶಕ (ವಿಬಿಜಿ ರಾಮ್ಜಿ)



