ಬೆಳಗಾವಿ: ರಾಜ್ಯದಲ್ಲಿ 2023-24ರಿಂದ ಇಲ್ಲಿಯವರೆಗೆ ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 2023-24ರಿಂದ ಇಲ್ಲಿಯವರೆಗೆ ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ ಎಂದು ಇದೇ ವೇಳೆ ಸದನದಲ್ಲಿ ಮಾಹಿತಿ ನೀಡಿದರು.
ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳ ಮೇಲೆ ತಪಾಸಣೆಗಳನ್ನು ಜಾಸ್ತಿ ಮಾಡಿರುವುದರಿಂದ ಹೆಚ್ಚಿನ ಸಂಖ್ಯೆಯ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಅಲ್ಲದೇ ಡಿಕಾಯ್ ಆಪರೇಷನ್‌ಗಳ ಯಶಸ್ವಿ ಕಾರ್ಯಾಚರಣೆಗಳನ್ನ ನಡೆಸಿ ಭ್ರೂಣೆ ಹತ್ಯೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಭ್ರೂಣ ಹತ್ಯೆ ತಡೆಯಲು ಸರ್ಕಾರವು ಪಿ.ಸಿ&ಪಿ.ಎನ್.ಡಿ.ಟಿ. ಕಾಯ್ದೆಯಡಿ ಬರುವ ಎಲ್ಲಾ ಶಾಸನಬದ್ದ ಸಮಿತಿಗಳನ್ನು ರಾಜ್ಯ ಮತ್ತು ಜಿಲ್ಲೆಗಳಲ್ಲಿ ರಚನೆ ಮಾಡಲಾಗಿದೆ. 2018 ರಿಂದ ರಾಜ್ಯದಲ್ಲಿ ‘ಬಾಲಿಕಾ’ ಆನ್ಲೈನ್ ಸಾಪ್ಟ್ವೇರ್ ಮುಖಾಂತರ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣ ನಡೆಸಲಾಗುತ್ತಿದೆ ಎಂದರು.