ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಿದೆ. ಗುರುವಾರ (ಅಕ್ಟೋಬರ್ 22) ಬೆಳಗ್ಗೆಯಿಂದಲೇ ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಹಲವು ಪ್ರದೇಶಗಳಲ್ಲಿ ದಿಢೀರ್ ಮಳೆ ಸುರಿದಿದೆ. ಜಯನಗರ, ಲಾಲ್ಬಾಗ್ ಸೇರಿದಂತೆ ನಗರದ ಪ್ರಮುಖ ಭಾಗಗಳಲ್ಲಿ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡುವಂತಾಗಿದೆ. ಇದರ ಬೆನ್ನಲ್ಲೇ ಅಕ್ಟೋಬರ್ 26ರವರೆಗೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ಕಂಡುಬಂದಿತ್ತು. ಮಧ್ಯಾಹ್ನದ ವೇಳೆಗೆ ಏಕಾಏಕಿ ಮಳೆ ಆರಂಭವಾಗಿದ್ದು, ನಗರದ ವಿವಿಧ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ರಸ್ತೆಗಳಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ತೊಂದರೆ ಅನುಭವಿಸಿದ್ದಾರೆ.
ನಗರದ ಪ್ರಮುಖ ವಾಣಿಜ್ಯ ಹಾಗೂ ಸಾರ್ವಜನಿಕ ಪ್ರದೇಶಗಳಾದ ಜಯನಗರ ಮತ್ತು ಲಾಲ್ಬಾಗ್ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಇದರೊಂದಿಗೆ ಕಾರ್ಪೊರೇಷನ್, ಕೆ.ಆರ್. ಮಾರ್ಕೆಟ್, ಶಾಂತಿನಗರ, ವಿಧಾನಸೌಧ, ರಾಜಾಜಿನಗರ ಹಾಗೂ ಮಲ್ಲೇಶ್ವರಂ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.
ದಿಢೀರ್ ಸುರಿದ ಮಳೆಯಿಂದಾಗಿ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಮಳೆಯಿಂದ ರಕ್ಷಣೆ ಪಡೆಯಲು ಪರದಾಡಿದ್ದಾರೆ. ಕೆಲವರು ರಸ್ತೆಬದಿಯ ಅಂಗಡಿಗಳು, ಹೋಟೆಲ್ಗಳು ಹಾಗೂ ಮೇಲ್ಸೇತುವೆಗಳ ಕೆಳಗೆ ಆಶ್ರಯ ಪಡೆದಿದ್ದಾರೆ. ಇನ್ನೂ ಕೆಲವರು ಛತ್ರಿಗಳನ್ನು ಹಿಡಿದು ಮಳೆಯ ನಡುವೆಯೇ ಸಂಚರಿಸುತ್ತಿದ್ದ ದೃಶ್ಯಗಳು ಕಂಡುಬಂದಿವೆ.
ಮಳೆಯ ಪರಿಣಾಮ ನಗರದ ಕೆಲವೆಡೆ ವಾಹನ ಸಂಚಾರಕ್ಕೂ ಅಡಚಣೆಯಾಗಿದೆ. ಮಳೆಯಿಂದ ತಪ್ಪಿಸಿಕೊಳ್ಳಲು ದ್ವಿಚಕ್ರ ವಾಹನ ಸವಾರರು ರಸ್ತೆಬದಿಯಲ್ಲಿ ವಾಹನಗಳನ್ನು ನಿಲ್ಲಿಸಿಕೊಂಡಿದ್ದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು.
ಇನ್ನು ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 22ರಿಂದ 26ರವರೆಗೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾದರೆ, ಇನ್ನೂ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗುರುವಾರ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಬಹುದೆಂದು ಅಂದಾಜಿಸಲಾಗಿದೆ. ದಿನವಿಡೀ ತಂಪಾದ ವಾತಾವರಣದ ಜೊತೆಗೆ ಮೋಡಕವಿದ ಹವಾಮಾನ ಮುಂದುವರಿಯುವ ನಿರೀಕ್ಷೆಯಿದೆ.
ರಾಜ್ಯದಲ್ಲಿ ಈಶಾನ್ಯ ಮುಂಗಾರಿನ ಪ್ರಭಾವ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುಂದಿನ ಏಳು ದಿನಗಳ ಮಳೆ ಮುನ್ಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಬಿಸಿಲು ಹಾಗೂ ಮೋಡಕವಿದ ವಾತಾವರಣದ ಜೊತೆಗೆ ಕೆಲವೆಡೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಮುಖ್ಯವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ನಿರೀಕ್ಷೆಯಿದ್ದು, ಅಕ್ಟೋಬರ್ 26ರವರೆಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮತ್ತೊಂದೆಡೆ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.









