ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ದಿಢೀರ್ ಭೂಕುಸಿತ ಸಂಭವಿಸಿದ್ದು, ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯೊಂದರಲ್ಲಿ ಯಾವುದೇ ಮುನ್ಸೂಚನೆ ಇಲ್ಲದೆ ಭೂಮಿ ಕುಸಿದಿದ್ದು, ಸುಮಾರು 20 ಅಡಿ ಆಳ ಹಾಗೂ 10 ಅಡಿ ಅಗಲದ ಭಾರಿ ಕುಳಿ ಉಂಟಾಗಿದೆ. ಹೊಲದ ಮಧ್ಯಭಾಗದಲ್ಲಿ ಭೂಮಿ ದಿಢೀರ್ ಕುಸಿದಿರುವ ದೃಶ್ಯವನ್ನು ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಭೂಕುಸಿತಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಅಪರೂಪದ ಘಟನೆಯಿಂದ ಗ್ರಾಮಸ್ಥರಲ್ಲಿ ಭಯ ಮತ್ತು ಕುತೂಹಲ ಮೂಡಿದೆ.
ಭೂ ವಿಜ್ಞಾನಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಭೂಕುಸಿತಕ್ಕೆ ಕಾರಣವಾದ ಅಂಶಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ವರದಿ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸದ್ಯ ಘಟನಾ ಸ್ಥಳದ ಸುತ್ತಮುತ್ತ ಎಚ್ಚರಿಕೆ ವಹಿಸಲಾಗಿದ್ದು, ಜನರು ಕುಸಿತ ಪ್ರದೇಶದ ಸಮೀಪ ತೆರಳದಂತೆ ಸೂಚಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.



