ವಿಜಯಸಾಕ್ಷಿ ಸುದ್ದಿ, ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 3ರಂದು ಗದಗ ಜಿಲ್ಲೆಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಮುಖ್ಯಮಂತ್ರಿಗಳ ಕಾರ್ಯಕ್ರಮವನ್ನು ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.
ರವಿವಾರ ಜಿಲ್ಲಾಡಳಿತ ಭವನದಲ್ಲಿ ಮುಖ್ಯಮಂತ್ರಿಗಳು ಜೂನ್ 3ರಂದು ಗದಗ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಿಎಂ ಸಿದ್ದರಾಮಯ್ಯ ಅವರು ಜೂನ್ 3ರಂದು ಬೆಳಿಗ್ಗೆ 11.05ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 11.25ಕ್ಕೆ ಗದಗ ಜಿಲ್ಲಾಡಳಿತ ಭವನದ ಆವರಣದ ಹೆಲಿಪ್ಯಾಡ್‌ಗೆ ಆಗಮಿಸುವರು. ಬೆ 11.40 ಗಂಟೆಗೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಶ್ರೀ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಉತ್ಖನನಕ್ಕೆ ಚಾಲನೆ ನೀಡುವರು. ಬಯಲು ವಸ್ತು ಸಂಗ್ರಹಾಲಯ ಆವರಣದ ಪ್ರಾಚ್ಯಾವಶೇಷಗಳ ವೀಕ್ಷಣೆ ಮಾಡಿ, ಶ್ರೀ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡುವರು. ಮಧ್ಯಾಹ್ನ 12.40 ಗಂಟೆಗೆ ಲಕ್ಕುಂಡಿ ಗ್ರಾಮದಿಂದ ಹೊರಟು ಗದಗ ನಗರಕ್ಕೆ ಆಗಮಿಸುವರು.
ನಂತರ ನಗರದ ಎಪಿಎಂಸಿ ಆವರಣದಲ್ಲಿನ ಸ್ವಾಮಿ ವಿವೇಕಾನಂದ ಭವನದಲ್ಲಿ ದಿ. ಕರ್ನಾಟಕ ಕುರುಬರ ಸಂಘ ಹಾಗೂ ಕರ್ನಾಟಕ ಕುರುಬರ ಸಹಕಾರ ಪತ್ತಿನ ಸಂಘ ಗದಗ ವತಿಯಿಂದ ಆಯೋಜಿಸಿರುವ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸುವರು.
ಸಂಜೆ 4.30ಕ್ಕೆ ಗದಗ ನಗರದ ಪಂಡಿತ ಭೀಮಸೇನ ಜೋಶಿ ರಂಗಮAದಿರದಲ್ಲಿ ಗದಗ ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರದ ಉದ್ಘಾಟನೆ ಹಾಗೂ 34 ಎಕರೆ ಪ್ರದೇಶದ ಪ್ರಾಧಿಕಾರದ ಪರಿಕಲ್ಪನೆ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 5.30 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಮಾಡಲಿದ್ದಾರೆ.
ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸಿ ನಿರ್ಗಮಿಸುವವರೆಗೂ ಎಲ್ಲರೂ ನಿರಂತರವಾಗಿ ನಿಗಾದಲ್ಲಿರಬೇಕು. ಈಗಾಗಲೇ ಕೆಲವು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ನಿಯೋಜನೆ ಮಾಡಲಾಗಿದೆ. ಅವರು ತಮ್ಮ ಕೆಲಸ ಸರಿಯಾಗಿ ನಿರ್ವಹಿಸಬೇಕು. ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನವಲಗುಂದ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ್ ಪೋತದಾರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಮೇಶ್ ಪಾಟೀಲ, ಆಹಾರ ಇಲಾಖೆ ಜಂಟಿ ನಿರ್ದೇಶಕ ವಿನಯಕುಮಾರ ಹೆಗ್ಗಳಗಿ, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣು ಗೊಗೇರಿ ಸೇರಿದಂತೆ ಇತರರು ಇದ್ದರು.
ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಮಾತನಾಡಿ, ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ ಸಂದರ್ಭದಲ್ಲಿ ಅನಗತ್ಯ ತೊಂದರೆಗಳಿಗೆ ಆಸ್ಪದವಾಗದಂತೆ ಕಾರ್ಯನಿರ್ವಹಿಸಬೇಕು. ಯಾವುದೇ ತರಹದ ಅನುಮಾನಗಳು, ಬದಲಾವಣೆಗಳು ಎದುರಾದಲ್ಲಿ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೆ ತರುವ ಮೂಲಕ ಪರಿಹಾರ ಕೊಂಡುಕೊಳ್ಳುವಂತೆ ತಿಳಿಸಿದರು.