ವಿಜಯನಗರ: ವಿದ್ಯುತ್ ತಂತಿ ತುಂಡಾಗಿ ಕಬ್ಬಿನ ಗದ್ದೆಗೆ ಬಿದ್ದ ಪರಿಣಾಮ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಬ್ಬು ಬೆಳೆ ಸುಟ್ಟುಹೋಗಿರುವ ಘಟನೆ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ನಡೆದಿದೆ.
ಮರಿಯಮ್ಮನಹಳ್ಳಿ ಪಟ್ಟಣದ ರೈತ ಟಿ. ಈ. ನಿಂಗಪ್ಪ ಅವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಇದರಿಂದ ಗದ್ದೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿದೆ.
ಘಟನೆಯಿಂದ ಸುಮಾರು ₹3 ಲಕ್ಷ ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಘಟನೆಯಿಂದ ರೈತ ನಿಂಗಪ್ಪ ಅವರಿಗೆ ಆರ್ಥಿಕ ನಷ್ಟ ಉಂಟಾಗಿದ್ದು, ಬೆಳೆ ಹಾನಿಗೆ ಪರಿಹಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.









