ಬೆಳಗಾವಿ: ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಕ್ವಿಂಟಾಲ್‌ಗೆ 3,500 ರೂ. ಬೆಲೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಇಂದು ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಭೆ ನಡೆಸುತ್ತಿದೆ. ಇದರ ನಡುವೆ ಹುಕ್ಕೇರಿ ತಾಲೂಕಿನ ಸಾವಿರಾರು ರೈತರು ಟ್ರ್ಯಾಕ್ಟರ್ಗಳ ಸಮೇತ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ್ದಾರೆ.
ಈ ವೇಳೆ ರಾಜ್ಯ ಸರ್ಕಾರ ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಸುಮಾರು ಒಂದು ಗಂಟೆಗೂ ಅಧಿಕ ಕಾಲ ಹೆದ್ದಾರಿ ಬಂದ್ ಆಗಿದ್ದ ಪರಿಣಾಮ ಸಾವಿರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಇದರಿಂದ ವಾಹನ ಸವಾರರು ಪರದಾಡಿದರು. ಒಂದು ಗಂಟೆ ಬಳಿಕ ಸರ್ವೀಸ್ ರಸ್ತೆಯಲ್ಲಿ ರೈತರು ಹೋರಾಟ ಶುರು ಮಾಡಿದ್ದಾರೆ. ಇಲ್ಲಿಯೇ ಅಡುಗೆ ಕೂಡ ಮಾಡುತ್ತಿದ್ದಾರೆ. 3,500 ರೂ. ದರ ಘೋಷಿಸುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ. ಸದ್ಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಸಂಚಾರಕ್ಕೆ ಸಾರ್ವಜನಿಕರಿಗೆ ಪೊಲೀಸರು ಮುಕ್ತ ಮಾಡಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಿದ್ದರಾಮಯ್ಯ ಅವರ ಸಭೆ ಆರಂಭವಾಗಿದೆ. 38 ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ಆಡಳಿತ ಮಂಡಳಿಯ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ಕಬ್ಬುಗೆ ಪ್ರತಿ ಟನ್ ಗೆ 3,500 ರೂಪಾಯಿ ಬೆಲೆ ನೀಡಬೇಕೆಂದು ಆಗ್ರಹಿಸಿ ರೈತರು ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಈ ಸಭೆ ನಡೆಸಲಾಗುತ್ತಿದೆ.


